ಜೂ.27: ಬಡಗಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ 15 ಲಕ್ಷ ಮೌಲ್ಯದ ಪರಿಕರ ವಿತರಣೆ, ಪ್ರತಿಭಾ ಪುರಸ್ಕಾರ

ಲೋಕಬಂಧು ನ್ಯೂಸ್ ಉಡುಪಿ, ಜೂ.25
ಸಾಮಾಜಿಕ ಕಳಕಳಿಯ ಧ್ಯೇಯದೊಂದಿಗೆ ಇಲ್ಲಿನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 15 ಲಕ್ಷ ರೂ. ಮೊತ್ತದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ ಕಾರ್ಯಕ್ರಮ ಜೂ. 27ರಂದು ಬೆಳಿಗ್ಗೆ 10:30ಕ್ಕೆ ಉಡುಪಿ ಅಜ್ಜರಕಾಡು ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೈಕ್ಷಣಿಕ ಸಾಮಗ್ರಿ ವಿತರಿಸಿ ಪ್ರೋತ್ಸಾಹಿಸಲಾಗುವುದು ಎಂದರು.


ಕಾರ್ಯಕ್ರಮವನ್ನು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಉಡುಪಿ ಡಯಟ್ ಪ್ರಾಂಶುಪಾಲ ಡಾ.ಅಶೋಕ್ ಕಾಮತ್ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ. ಉಪಸ್ಥಿತರಿರುವರು. ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ.


ಅಂದು ಬೆಳಿಗ್ಗೆ 9:30ರಿಂದ ವಿದ್ಯಾರ್ಥಿಗಳಿಗಾಗಿ ಸಂಪನ್ಮೂಲ ವ್ಯಕ್ತಿ ದಾಮೋದರ್ ಶರ್ಮ ಬಾರ್ಕೂರು ಅವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ ಎಂದರು.


ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಇದ್ದರು.