ಕರಾವಳಿಯಲ್ಲಿ ಜು.6ರ ವರೆಗೆ ಆರೆಂಜ್ ಅಲರ್ಟ್

ಲೋಕಬಂಧು ನ್ಯೂಸ್ | ಮಣಿಪಾಲ, ಜೂ.29
ಭಾರತೀಯ ಹವಾಮಾನ ಇಲಾಖೆ ಮತ್ತು‌ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಉಡುಪಿಯೂ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ ಅಂದರೆ ಜೂ. 30ರಿಂದ ಜು.6ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ, ಗಾಳಿ, ಸಿಡಿಲು ಸಂದರ್ಭದಲ್ಲಿ ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ, ಸಿಡಿಲಿನ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು ಮತ್ತು ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ಜಲ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯಬಾರದು.


ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ  ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಗೆಲ್ಲು, ರೆಂಬೆ-ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.


ಹೆಚ್ಚು ಮಳೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಭೂ ಕುಸಿತವಾಗುವ ಸಂಭವ ಹೆಚ್ಚಾಗಿದ್ದು, ಅಂಥ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಚೇರಿ ಅಥವಾ ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿ ಉಳಿದುಕೊಳ್ಳಬಹುದು.

ಮುಂದಿನ 7 ದಿನಗಳಲ್ಲಿ ಹೆಚ್ಚು ಗಾಳಿಯೊಂದಿಗೆ ಭಾರಿ ಮಳೆಯಾಗುವುದರಿಂದ ಸಾರ್ವಜನಿಕರು ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ವಾಸಿಸಬೇಕು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು


ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ತುರ್ತು ಸೇವೆಗೆ ಶುಲ್ಕ ರಹಿತ 1077 ಅಥವಾ 0820-2574802 ಅಥವಾ ಆಯಾ ತಾಲೂಕು ತಹಶೀಲ್ದಾರರ ಕಚೇರಿಗಳಾದ ಉಡುಪಿ 0820-2520417, ಕುಂದಾಪುರ 08254-230357 ಕಾರ್ಕಳ 08258-230201, ಕಾಪು 0820-2551444, ಬ್ರಹ್ಮಾವರ 0820-2560494, ಬೈಂದೂರು 08254-251657 ಹಾಗೂ ಹೆಬ್ರಿ 08253-250201 ಮತ್ತು ಉಡುಪಿ ನಗರಸಭೆ ಸಹಾಯವಾಣಿ ಸಂಖ್ಯೆ 0820-2520306ಗೆ ಕರೆ ಮಾಡಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ,  ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.