ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಮನವಿ

ಲೋಕಬಂಧು ನ್ಯೂಸ್ | ಕಾರ್ಕಳ, ಜೂ.13
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ವತಿಯಿಂದ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ಶೀಘ್ರವಾಗಿ ಸ್ಥಾಪಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ ಉದಯ ಶೆಟ್ಟಿ, ತುಳು ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳು ಭಾಷೆ ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗವಾಗಿದೆ.


ಜಾಗತೀಕರಣದ ಪರಿಣಾಮವಾಗಿ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ.


ಈಗಾಗಲೇ ಯುನೆಸ್ಕೊ ಕೂಡಾ ತುಳು ಭಾಷೆಯನ್ನು ಸಂರಕ್ಷಿಸಬೇಕಾದ ಭಾಷೆ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ತುಳು ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ವಿಶೇಷ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ.


ಆದ್ದರಿಂದ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತುಳು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ, ತುಳು ಸಾಹಿತ್ಯದ ಸಂಶೋಧನೆ ಹಾಗೂ ಪ್ರಕಟಣೆಗಳಿಗೆ ಉತ್ತೇಜನ, ಶಾಲೆ ಮತ್ತು ಕಾಲೇಜುಗಳಲ್ಲಿ ತುಳು ಅಧ್ಯಯನಕ್ಕೆ ಹೆಚ್ಚಿನ ಪ್ರೋತ್ಸಾಹ, ತುಳು ಜಾನಪದ ಕಲೆ, ಯಕ್ಷಗಾನ, ಭೂತಾರಾಧನೆ ಹಾಗೂ ಇತರ ಸಾಂಸ್ಕೃತಿಕ ಪರಂಪರೆಗಳ ಸಂರಕ್ಷಣೆ, ತುಳು ಭಾಷೆಗೆ ಸಾಂವಿಧಾನಿಕ ಹಾಗೂ ಶೈಕ್ಷಣಿಕ ಮಾನ್ಯತೆ ದೊರಕುವಂತೆ ಕ್ರಮ ಕೈಗೊಳ್ಳುವುದು, ತುಳುನಾಡಿನ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.


ಕಾರ್ಕಳದಲ್ಲಿ ತುಳು ಭವನ
ಕಾರ್ಕಳ ತಾಲೂಕಿನಲ್ಲಿ ತುಳು ಭವನ ನಿರ್ಮಾಣ ಮಾಡುವ ಕುರಿತು ಮನವಿ ಮಾಡಿದ್ದು ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸುಸಜ್ಜಿತ ತುಳು ಭವನ ನಿರ್ಮಾಣ ಅಗತ್ಯವಾಗಿದೆ.


ಕಾರ್ಕಳ ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿ ತುಳು ಭಾಷೆ, ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಹಾಗೂ ಇತರ ಜನಪದ ಕಲೆಗಳು ಇಂದಿಗೂ ಜೀವಂತವಾಗಿವೆ. ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ, ಅಧ್ಯಯನ ಮತ್ತು ಪ್ರಚಾರಕ್ಕಾಗಿ ಕಾರ್ಕಳದಲ್ಲಿ ತುಳು ಭವನದ ಅಗತ್ಯವಿದೆ.


ಪ್ರಸ್ತಾವಿತ ತುಳು ಭವನದಲ್ಲಿ ಗ್ರಂಥಾಲಯ, ಸಂಶೋಧನಾ ಕೇಂದ್ರ, ಸಭಾಂಗಣ, ವಸ್ತುಸಂಗ್ರಹಾಲಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬಹುದಾಗಿದೆ. ಅದರಿಂದ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ.


ಆದ್ದರಿಂದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸರ್ಕಾರದ ವತಿಯಿಂದ ಸೂಕ್ತ ಜಾಗ ಗುರುತಿಸಿ ಅಗತ್ಯ ಅನುದಾನ ಮಂಜೂರು ಮಾಡಿ ಶೀಘ್ರದಲ್ಲೇ ತುಳು ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಉದಯ ಶೆಟ್ಟಿ ಮುನಿಯಾಲು ನೂತನ ಮುಖ್ಯಮಂತ್ರಿ ಡಿಕೆಶಿ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.