ಲೋಕಬಂಧು ನ್ಯೂಸ್ | ಉಡುಪಿ, ಜೂ.13
ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲಾಗಿದೆ.
ಆತನ ವಿರುದ್ಧ ಮಣಿಪಾಲ ಮತ್ತು ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 3 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 2 ಪ್ರಕರಣ ದಾಖಲಾಗಿದೆ.
ಮಾದಕ ವಸ್ತು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳಲ್ಲಿ 1 ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣ ತನಿಖೆಯಲ್ಲಿದೆ. ದಾಖಲಾದ 2 ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ.
ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
