ತಮಿಳುನಾಡು ಸಿಎಂ ವಿಜಯ್'ಗೆ ಕಪ್ಪುಬಾವುಟ ಪ್ರದರ್ಶನ ಯತ್ನ: 20ಕ್ಕೂ ಅಧಿಕ ಕರವೇ ಕಾರ್ಯಕರ್ತರ ಬಂಧನ

ಲೋಕಬಂಧು ನ್ಯೂಸ್ | ಉಡುಪಿ, ಜೂ.12
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಭೇಟಿ ಸಂದರ್ಭದಲ್ಲಿ ಮೇಕೆದಾಟು ಯೋಜನೆ ವಿಚಾರವನ್ನು ಮುಂದಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ ಶೆಟ್ಟಿ ಬಣ) ಕಾರ್ಯಕರ್ತರು ಕರಿಪತಾಕೆ ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾದ ಘಟನೆ ಶುಕ್ರವಾರ ನಡೆದಿದೆ.
ಉದ್ಯಾವರ ಬಲಾಯಿಪಾದೆ ಬಳಿ ಪ್ರತಿಭಟನೆ ನಡೆಸಲು ಕಾರ್ಯಕರ್ತರು ಸಿದ್ಧತೆ ನಡೆಸುತ್ತಿದ್ದ ವೇಳೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರವೇಶಿಸಿ, ಪ್ರತಿಭಟನೆ ಆರಂಭವಾಗುವ ಮುನ್ನವೇ 20ಕ್ಕೂ ಅಧಿಕ ಮಂದಿ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.
ಜೋಸೆಫ್‌ ವಿಜಯ್ ಆಗಮನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಝಡ್+ ಭದ್ರತೆ ಹೊಂದಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರಿಗೆ ಆಗಮಿಸುವ ಮುನ್ನವೇ ಪ್ರತಿಭಟನಾ ನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಿದ್ದರು. ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು.


ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ನೇತೃತ್ವದಲ್ಲಿ ಪ್ರತಿಭಟನೆಗೆ ಸಿದ್ಧತೆ ‌ನಡೆಸಲಾಗಿತ್ತು.