ಲೋಕಬಂಧು ನ್ಯೂಸ್ | ದಾವಣಗೆರೆ, ಜೂ.24
ಜಿಲ್ಲೆಯ ಹರಿಹರದಲ್ಲಿ ಮಂಗಳವಾರ ಬಂಧಿಸಲ್ಪಟ್ಟಿರುವ 20 ವರ್ಷದ ಶಂಕಿತ ವ್ಯಕ್ತಿಯ ವಿಚಾರಣೆ ವೇಳೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಲಭ್ಯವಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ ಸುಹೇಲ್ ಎಂಬಾತನನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಹಲವು ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಬಂಧಿತ ಶಂಕಿತ ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ. ಆದರೆ, ಈ ಕುರಿತಂತೆ ತನಿಖೆ ಇನ್ನೂ ಮುಂದುವರಿದಿದ್ದು, ಅಧಿಕೃತ ದೃಢೀಕರಣ ಮತ್ತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬಂಧಿತ ಸುಹೇಲ್, ಹರಿಹರ ಸಮೀಪದ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಾರ್ಖಾನೆಯೊಂದರಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದು, ಸಾಮಾನ್ಯ ಕಾರ್ಮಿಕನಂತೆ ವರ್ತಿಸಿ ಅಡಗಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಚಟುವಟಿಕೆಗಳ ಮೇಲೆ ಅನುಮಾನಗೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು, ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತನಿಖೆಯ ಭಾಗವಾಗಿ ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ, ಅಂತಾರಾಷ್ಟ್ರೀಯ ಉಗ್ರ ಜಾಲದೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆಯ ಸುಳಿವು ಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಕಂಟ್ರಿ ಕೋಡ್ ಹೊಂದಿರುವ ಮೊಬೈಲ್ ಸಂಖ್ಯೆ ‘ರಾಣಾ ಬಾಯ್’ ಎಂಬ ಹೆಸರಿನಲ್ಲಿ ಸೇವ್ ಆಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.
ಅದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುವ ಶಂಕೆಯಿರುವ ಕೆಲವು ರಹಸ್ಯ ಗುಂಪುಗಳಾದ ‘ಮೆಮೊನ್ & ಜುಟ್ಟು-333’ ಹಾಗೂ ‘ರಾಣಾಭಾಯ್ 333’ ಗುಂಪುಗಳಲ್ಲಿ ಆತ ಸಕ್ರಿಯನಾಗಿದ್ದಾನೆ ಎಂಬ ಶಂಕೆಯೂ ವ್ಯಕ್ತವಾಗಿದೆ.
ಆರೋಪಿಯ ಮೊಬೈಲ್ ಗ್ಯಾಲರಿಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ತೆಗೆಸಿಕೊಂಡಿರುವ ಹಲವು ಫೋಟೋಗಳು ಪತ್ತೆಯಾಗಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.
ಭಾರತದಲ್ಲಿ ದೊಡ್ಡ ಮಟ್ಟದ ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಸಂಚು ರೂಪಿಸಲಾಗಿತ್ತೇ ಎಂಬ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿಚಾರಣೆ ಮತ್ತು ತನಿಖೆಗಾಗಿ ಆರೋಪಿಯನ್ನು ಮಂಗಳವಾರ ಸಂಜೆ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವದ ಮಾಹಿತಿ ಹೊರಬರುವ ಸಾಧ್ಯತೆ ಇದೆ.