ಲೋಕಬಂಧು ನ್ಯೂಸ್ | ಉಡುಪಿ, ಜೂ.20
ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಉಡುಪಿ ಜಿಲ್ಲಾ ಸಮಿತಿಯನ್ನು ಪುನಾರಚಿಸಲಾಗಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಮಂಜುನಾಥ್ ವಿ. ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾ ಅಧ್ಯಕ್ಷರನ್ನಾಗಿ ಶೇಖರ್ ಹೆಜಮಾಡಿ ಅವರನ್ನು ನೇಮಿಸಲಾಗಿದೆ ಎಂದವರು ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ತೊಟ್ಟಂ, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕುಂದಾಪುರ ಮತ್ತು ಆನಂದ ಬ್ರಹ್ಮಾವರ, ಖಜಾಂಚಿಯಾಗಿ ಪುಷ್ಪಾಕರ ಕೊರಂಗ್ರಪಾಡಿ ಹಾಗೂ ಜಿಲ್ಲಾ ಕಚೇರಿ ಕಾರ್ಯದರ್ಶಿಯಾಗಿ ವಿಠಲ ಸಾಲಿಕೇರಿ ಆಯ್ಕೆಯಾಗಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಶೇಖರ್ ಹೆಜಮಾಡಿ ಮಾತನಾಡಿ, ಮುಂಬರುವ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲು ಮತ್ತು ಬಹುಜನ ಸಮುದಾಯದ ಧ್ವನಿಯನ್ನು ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಬಲಪಡಿಸಲು ಪಕ್ಷ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದೆ ಎಂದರು.
ಜಿಲ್ಲೆಯಾದ್ಯಂತ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಸೇರುವಂತೆ ಕರೆ ನೀಡಿದರು. ಸಂವಿಧಾನದ ಮೌಲ್ಯಗಳನ್ನು ಉಳಿಸಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಆಶಯಗಳನ್ನು ಸಾಕಾರಗೊಳಿಸುವುದೇ ಬಹುಜನ ಸಮಾಜ ಪಾರ್ಟಿಯ ಪ್ರಮುಖ ಗುರಿ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ತೊಟ್ಟಂ, ಉಪಾಧ್ಯಕ್ಷರಾದ ಗೋಪಾಲಕೃಷ್ಣ ಕುಂದಾಪುರ ಮತ್ತು ಆನಂದ ಬ್ರಹ್ಮಾವರ, ಖಜಾಂಚಿ ಪುಷ್ಪಾಕರ ಕೊರಂಗ್ರಪಾಡಿ, ಜಿಲ್ಲಾ ಕಚೇರಿ ಕಾರ್ಯದರ್ಶಿ ವಿಠಲ ಸಾಲಿಕೇರಿ ಹಾಗೂ ರಮೇಶ್ ಇದ್ದರು.
