ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಶೀಘ್ರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಲೋಕಬಂಧು ನ್ಯೂಸ್ ಬೆಂಗಳೂರು, ಜೂ.21
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣದ ಕುರಿತು ಸತ್ಯಾಸತ್ಯತೆ ತಿಳಿದುಕೊಳ್ಳಲು ಹಾಗೂ ಕಾರ್ಯಕರ್ತರಲ್ಲಿರುವ ಗೊಂದಲ ನಿವಾರಣೆಗೆ ಶೀಘ್ರದಲ್ಲೇ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರೊಂದಿಗೆ ಚರ್ಚಿಸಿ ಸಭೆಯ ದಿನಾಂಕ ನಿಗದಿಪಡಿಸಲಾಗುವುದು ಎಂದರು.


ನಾವೆಲ್ಲರೂ ದೇವರನ್ನು ನಂಬುವವರು. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಸಭೆ ನಡೆಸಿ ಪಕ್ಷಕ್ಕೆ ದ್ರೋಹ ಮಾಡಿದವರು ಯಾರು, ಸತ್ಯ ಯಾವುದು ಎಂಬುದು ಸ್ಪಷ್ಟವಾಗಬೇಕು. ಈ ವಿಚಾರದಲ್ಲಿ ಅಂತಿಮ ತೀರ್ಮಾನ ಶ್ರೀ ಕ್ಷೇತ್ರದಲ್ಲೇ ಆಗಬೇಕು ಎಂಬ ಅಭಿಪ್ರಾಯ ನನ್ನದು ಎಂದು ವಿಜಯೇಂದ್ರ ತಿಳಿಸಿದರು.


ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಅಡ್ಡ ಮತದಾನ ಮಾಡಿರುವುದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಈ ಬೆಳವಣಿಗೆ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಹಾಗೂ ಗೊಂದಲಕ್ಕೆ ಕಾರಣವಾಗಿದೆ.


ಅಡ್ಡ ಮತದಾನದ ವಿಚಾರವನ್ನು ನನ್ನ ಮನಸಾಕ್ಷಿಯೂ ಒಪ್ಪುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಟೀಕೆಗಳನ್ನು ನಾನು ಗಮನಿಸಿದ್ದೇನೆ. ಆದರೆ, ಈ ವಿಚಾರವನ್ನು ನೆಪ ಮಾಡಿಕೊಂಡು ಪಕ್ಷದ ವಿರುದ್ಧ ಪರೋಕ್ಷ ದಾಳಿ ನಡೆಸುವ ಹಾಗೂ ಕುತಂತ್ರ ರೂಪಿಸುವ ಪ್ರಯತ್ನಗಳೂ ನಡೆಯುತ್ತಿವೆ.


ಈ ಹಿನ್ನೆಲೆಯಲ್ಲಿ ನಿಜಾಂಶವನ್ನು ಜನರ ಮುಂದಿಡುವುದು ಅಗತ್ಯ. ಪಕ್ಷದ ಗೌರವ ಉಳಿಸುವ ಜೊತೆಗೆ ಕಾರ್ಯಕರ್ತರಿಗೆ ನೆಮ್ಮದಿ ನೀಡುವ ಹೊಣೆಗಾರಿಕೆಯೂ ನಮ್ಮ ಮೇಲಿದೆ ಎಂದು ವಿಜಯೇಂದ್ರ ಹೇಳಿದರು.


ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ನಾಲ್ವರು ಶಾಸಕರು ಅಡ್ಡ ಮತದಾನ ಮಾಡಿರುವ ಸಾಧ್ಯತೆ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಚರ್ಚೆ ನಡೆಯುತ್ತಿದೆ. ಅದರಿಂದ ರಾಜ್ಯದಾದ್ಯಂತ ಬಿಜೆಪಿ ಕಾರ್ಯಕರ್ತರು ತಮ್ಮ ಶಾಸಕರ ನಡೆ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದು, ಪಕ್ಷದ 63 ಶಾಸಕರ ಮೇಲೆಯೇ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಹೇಳಿದರು.