ಉಡುಪಿಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರ್ಕಾರ ಸಮ್ಮತಿ

ಲೋಕಬಂಧು ನ್ಯೂಸ್ | ಉಡುಪಿ, ಜೂ.20
ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆಯಡಿ (ಎನ್ಐಎ) ಮತ್ತು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ದಾಖಲಾಗಿರುವ ಪ್ರಕರಣಗಳ ವಿಚಾರಣೆಗಾಗಿ ಹೆಚ್ಚುವರಿ ವಿಶೇಷ ನ್ಯಾಯಾಲಯ ಸ್ಥಾಪಿಸುವಂತೆ ಸರ್ವೋಚ್ಛ ನ್ಯಾಯಾಲಯದ ಸ್ವಯಂ ನಿರ್ದೇಶನದನ್ವಯ ಕರ್ನಾಟಕ ಉಚ್ಛ ನ್ಯಾಯಾಲಯದ ಶಿಫಾರಸಿನ ಮೇರೆಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವನ್ನು ಉಡುಪಿಯಲ್ಲಿ ಸ್ಥಾಪಿಸಲು ಮಂಜೂರಾತಿ ನೀಡಿ ಕರ್ನಾಟಕ ಸರಕಾರ ಅಧಿಸೂಚನೆ ಹೊರಡಿಸಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ದಾಖಲಾಗಿರುವ ಮತ್ತು ಇನ್ನು ಮುಂದೆ ದಾಖಲಾಗುವ ಎನ್ಐಎ/ಯುಎಪಿಎ ಪ್ರಕರಣಗಳ ವಿಚಾರಣೆ ಉಡುಪಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರ್ವಹಿಸಲ್ಪಡಲಿದೆ.


ಈ ವಿಶೇಷ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಧೀಶರ ಸಹಿತ ಒಟ್ಟು 13 ವಿವಿಧ ಪೂರಕ ಹುದ್ದೆಗಳನ್ನು ಸೃಜಿಸಲು ಕೂಡಾ ಸರಕಾರ ಮಂಜೂರಾತಿ ನೀಡಿದೆ ಎಂದು ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.