ಲೋಕಬಂಧು ನ್ಯೂಸ್ | ಉಡುಪಿ, ಜೂ.14
ರಾಜ್ಯ ಸರ್ಕಾರ, ಅಧಿಕಾರಿಗಳು ಮತ್ತು ನೌಕರರಿಗೆ ಬೆದರಿಕೆ ಹಾಕುವ ಬದಲು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳನ್ನು ಪರಿಹರಿಸುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಸಲಹೆ ನೀಡಿದ್ದಾರೆ.
ಸರ್ಕಾರಿ ನೌಕರರಿಗೆ ಸಮಯ ಪಾಲನೆ ಕಡ್ಡಾಯಗೊಳಿಸುವ ಕ್ರಮಕ್ಕೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಸರ್ಕಾರದ ನಿಯಮಾವಳಿ ಪ್ರಕಾರ ಕಚೇರಿಗಳ ಕಾರ್ಯಾವಧಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ನಿಗದಿಯಾಗಿರುವುದು ಹೊಸ ವಿಷಯವಲ್ಲ. ಈ ನಿಯಮ ಹಲವು ವರ್ಷಗಳಿಂದ ಜಾರಿಯಲ್ಲಿದ್ದು, ಸರ್ಕಾರಿ ನೌಕರರು ಸಮಯ ಪಾಲನೆ ಮಾಡುತ್ತಿಲ್ಲ ಎನ್ನುವುದಾದರೆ ಅದು ಸರ್ಕಾರದ ಆಡಳಿತ ವೈಫಲ್ಯ ಮತ್ತು ಮುಖ್ಯಮಂತ್ರಿಯ ನಿರ್ಲಕ್ಷ್ಯವನ್ನು ಸೂಚಿಸುತ್ತದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರಾವಳಿ ಭಾಗಕ್ಕೆ ಭೇಟಿ ನೀಡಿ ಕಳೆದ ಮೂರು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪಗಳಿಂದ ಉಂಟಾದ ಹಾನಿಗೆ ಸಂಬಂಧಿಸಿದ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು.
ಯಾವ ಕೆಲಸ ಆಗಬೇಕೋ ಅದರ ಕಡೆ ಮುಖ್ಯಮಂತ್ರಿ ಗಮನಹರಿಸಲಿ. ಕರಾವಳಿ ಭಾಗದ ಜನರು ಪ್ರಕೃತಿ ವಿಕೋಪಗಳಿಂದ ಸಂಕಷ್ಟ ಅನುಭವಿಸುತ್ತಿದ್ದು, ಪರಿಹಾರ ವಿತರಣೆಯಲ್ಲಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಶಪಾಲ್ ಆಗ್ರಹಿಸಿದರು.
