ವಿಶ್ವದ ಗಮನ ಸೆಳೆದ ಕೆಂಪೇಗೌಡ ನಿರ್ಮಿತ ಬೆಂಗಳೂರು ನಗರ

ಲೋಕಬಂಧು ನ್ಯೂಸ್ | ಉಡುಪಿ, ಜೂ.28
ನಾಡಗೌಡ ಕೆಂಪೇಗೌಡ ನಿರ್ಮಿಸಿದ ಬೆಂಗಳೂರು ಎಲ್ಲಾ ಕ್ಷೇತ್ರದಲ್ಲಿಯೂ ಮುಂಚೂಣಿಯಲಿದ್ದು, ನಾಡಿನ ಭವಿಷ್ಯದ ದೃಷ್ಟಿಯಿಂದ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಅವರು ಜಾರಿಗೆ ತಂದ ಹಲವು ಜನಪ್ರಿಯ ಯೋಜನೆಗಳಿಂದ ಇಂದು ಬೆಂಗಳೂರು ಇಡೀ ವಿಶ್ವದ ಗಮನ ಸೆಳೆದಿದೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು.
ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಇಂದಿನ ಪೀಳಿಗೆಗೆ ಕೆಂಪೇಗೌಡರ ಪರಿಶ್ರಮ ಹಾಗೂ ನಾಡು ಕಟ್ಟಿದ ಬಗೆಗೆ ತಿಳಿಸುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮ ಆಚರಿಸಿಕೊಂಡು ಬರುತ್ತಿದ್ದು, ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದರು.


ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಮೂಲಭೂತ ಸೌಕರ್ಯ ಒದಗಿಸುವುದರೊಂದಿಗೆ ಬೆಂಗಳೂರಿನ ಇಂದಿನ ಅಭಿವೃದ್ಧಿಯಲ್ಲಿ ಕೆಂಪೇಗೌಡರ ಕೊಡುಗೆ ಅಪಾರ. ಕೇವಲ ಒಂದೇ ಜಾತಿಗೆ ಸೀಮಿತವಾಗಿರದೇ ಸರ್ವಧರ್ಮೀಯರನ್ನೂ ಸಮಾನವಾಗಿ ಕಾಣುತ್ತಿದ್ದ ಅವರ ಆದರ್ಶ ನಮ್ಮೆಲ್ಲರಿಗೆ ಹಾಗೂ ಮುಂದಿನ ಪೀಳಿಗೆಗೂ ಮಾರ್ಗದರ್ಶನವಾಗಲಿ ಎಂದು ಆಶಿಸಿದರು.


ವಿಶೇಷ ಉಪನ್ಯಾಸ ನೀಡಿದ ನಿವೃತ್ತ ಉಪನ್ಯಾಸಕ ದಯಾನಂದ ಡಿ.ಕಿದಿಯೂರು, ಪ್ರಗತಿಪರ ಚಿಂತನೆ ಹೊಂದಿದ್ದ ನಾಡಪ್ರಭು ಕೆಂಪೇಗೌಡ, ಸಮಾಜದ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ವೃತ್ತಿ ಆಧಾರಿತವಾಗಿ ಜನರ ಆರ್ಥಿಕ ಅಭಿವೃದ್ಧಿಗೆ ಅನೇಕ ಪೇಟೆಗಳನ್ನು ನಿರ್ಮಿಸಿದ್ದರು. ಅಪಾರ ಪರಿಸರ ಕಾಳಜಿ ಹೊಂದಿದ್ದ ಅವರು ಕೃಷಿ ಮತ್ತು ಕುಡಿಯುವ ನೀರಿಗಾಗಿ ಹಲವು ಕೆರೆಗಳ ನಿರ್ಮಾಣವನ್ನು ವೈಜ್ಞಾನಿಕವಾಗಿ ಮಾಡಿದ್ದಾರೆ ಎಂದರು.


ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮ, ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘ ಕಾರ್ಯದರ್ಶಿ ಹೇಮಾನಂದ ಹಲ್ದಡ್ಕ, ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮೊದಲಾದವರಿದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಷಿಮಾ ಸ್ವಾಗತಿಸಿ, ವರ್ಷಾ ಬಿ. ಕೋಟ್ಯಾನ್ ನಿರೂಪಿಸಿದರು. ಸರಕಾರಿ ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಬಿ. ವಂದಿಸಿದರು.