ಆಳ್ವಾಸ್‌ನಲ್ಲಿ 1,500ಕ್ಕೂ ಅಧಿಕ ವಿದ್ಯಾರ್ಥಿಗಳ ಸಾಮೂಹಿಕ ಯೋಗಾಭ್ಯಾಸ

ಲೋಕಬಂಧು ನ್ಯೂಸ್ ಮೂಡುಬಿದಿರೆ, ಜೂ‌.21
'ಆರೋಗ್ಯಕರ ವಯೋವೃದ್ಧಿಗಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ 1,500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾನುವಾರ ಬೆಳಿಗ್ಗೆ ಸಾಮೂಹಿಕ ಯೋಗಾಭ್ಯಾಸ ನಡೆಸುವ ಮೂಲಕ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಇಲ್ಲಿನ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮವನ್ನು ಆಳ್ವಾಸ್ ಫಾರ್ಮಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಉದ್ಘಾಟಿಸಿದರು.


ಖ್ಯಾತ ಸಂಗೀತ ನಿರ್ದೇಶಕ ವಿ. ಮನೋಹರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.


ಆಳ್ವಾಸ್ ಶಾಲೆ, ನರ್ಸಿಂಗ್ ಕಾಲೇಜು, ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಆಯುರ್ವೇದ ವೈದ್ಯಕೀಯ ಕಾಲೇಜು, ಹೋಮಿಯೋಪತಿ ವೈದ್ಯಕೀಯ ಕಾಲೇಜು, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಹಾಗೂ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಸಾಮಾನ್ಯ ಯೋಗ ಪ್ರೋಟೋಕಾಲ್‌ಗೆ ಅನುಗುಣವಾಗಿ ವ್ಯಾಯಾಮ, ವಿವಿಧ ಆಸನಗಳು, ಪ್ರಾಣಾಯಾಮ ಹಾಗೂ ಧ್ಯಾನಾಭ್ಯಾಸಗಳನ್ನು ನಡೆಸಲಾಯಿತು.


ಯೋಗಾಭ್ಯಾಸ ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಭಾವನಾತ್ಮಕ ಸಮತೋಲನ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂಬ ಸಂದೇಶವನ್ನು ಕಾರ್ಯಕ್ರಮ ಪರಿಣಾಮಕಾರಿಯಾಗಿ ಸಾರಿತು.


ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಅನಂತಕೃಷ್ಣ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮ ಆರೋಗ್ಯಕರ ಜೀವನ ಶೈಲಿಯ ಮಹತ್ವವನ್ನು ಪ್ರತಿಪಾದಿಸುವುದರೊಂದಿಗೆ ಯೋಗವನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಳ್ಳುವ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿತು.