ಲೋಕಬಂಧು ನ್ಯೂಸ್ ಕುಂದಾಪುರ, ಜೂ.28
ಕೊಲ್ಲೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು, ದೇವಳದ ಆಡಳಿತ ಸಮಿತಿ ಸಹಕಾರದೊಂದಿಗೆ ಸಂಪೂರ್ಣ ಅಭಿವೃದ್ಧಿ ಕಾರ್ಯ ಮುಖ್ಯವಾಗಿ ಭಕ್ತರ ಅನುಕೂಲತೆಗೆ ಅಗತ್ಯವಿರುವ ವಿಚಾರ ಗಮನದಲ್ಲಿಟ್ಟುಕೊಳ್ಳುವುದೂ ಅತೀ ಅಗತ್ಯ ಎಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಭಾನುವಾರ ದಂಪತಿ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಕ್ಷೇತ್ರದಲ್ಲಿ ನಡೆದ ಚಂಡಿಕಾ ಹೋಮದಲ್ಲಿಯೂ ಪಾಲ್ಗೊಂಡರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರಿಗೆ ದರ್ಶನ, ಪಾರ್ಕಿಂಗ್, ವಸತಿ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗಿದ್ದು, ಅದನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಿಗೆ ಸಂಬಂಧಿಸಿ ಒತ್ತುವರಿಯಾಗಿರುವ ಎಲ್ಲಾ ಜಮೀನು ತೆರವಿಗೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಪರಮೇಶ್ವರ ತಿಳಿಸಿದರು.ದೇವಾಲಯದ ಆಡಳಿತ ಮಂಡಳಿ ವತಿಯಿಂದ ಉಪಮುಖ್ಯಮಂತ್ರಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಅಭಿಲಾಷ್ ಪಿ.ವಿ., ಸುರೇಂದ್ರ ಶೆಟ್ಟಿ, ರಘುರಾಮ ದೇವಾಡಿಗ, ಸುಧಾ ಕೆ. ಮತ್ತು ಧನಾಕ್ಷಿ ಪೂಜಾರಿ, ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಮೊದಲಾದವರಿದ್ದರು.