ಲೋಕಬಂಧು ನ್ಯೂಸ್ | ಮಂಗಳೂರು, ಜೂ.11
ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆ ಹಿನ್ನೆಲೆಯಲ್ಲಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಬುಧವಾರ ರಾತ್ರಿ ವಿಶೇಷ ರಂಗಪೂಜೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಮೋದಿ ಸರ್ಕಾರ ಹನ್ನೆರಡು ವರ್ಷ ಕಾಲ ನಿರಂತರ ಹಾಗೂ ಕಳಂಕ ರಹಿತ ಜನಪರ ಆಡಳಿತ ನೀಡಿ ವಿಕಸಿತ ಭಾರತದ ಸಂಕಲ್ಪದೊಂದಿಗೆ ದಾಪುಗಾಲಿಡುತ್ತಿದೆ. ಅವರಿಗೆ ದೇಶದ ಸಮಸ್ತ ಜನತೆಯ ಆಶೀರ್ವಾದ ಸದಾ ಕಾಲ ಇರಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪ್ರಧಾನಿ ಮೋದಿ ಯಶಸ್ವಿ ಆಡಳಿತದ 12ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಜೂ.13ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ ಮೋಹನ್ ಅಗರ್ವಾಲ್ ಆಗಮಿಸಲಿದ್ದು ಮಾರ್ಗನ್ ಗೇಟ್'ನ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಮತ್ತು ಯತೀಶ್ ಆರ್ವರ್, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು, ಮೋನಪ್ಪ ಭಂಡಾರಿ, ಸಂಜಯ್ ಪ್ರಭು, ನಿತಿನ್ ಕುಮಾರ್, ರಾಜಗೋಪಾಲ್ ರೈ, ನಿಕಟಪೂರ್ವ ಪಾಲಿಕೆ ಸದಸ್ಯರು ಸೇರಿದಂತೆ ವಿವಿಧ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
