ಲೋಕಬಂಧು ನ್ಯೂಸ್ | ಮಣಿಪಾಲ, ಜೂ.18
ಜಿಲ್ಲೆಯ ಕೈಗಾರಿಕಾ ಘಟಕಗಳಲ್ಲಿ ಉದ್ಯೋಗ ಕೈಗೊಳ್ಳಲು ಅವಶ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಗಳನ್ನು ಕೈಗಾರಿಕಾ ತರಬೇತಿ ಸಂಸ್ಥೆಗಳು ಯುವಜನರಿಗೆ ನೀಡಿ, ಸ್ಥಳೀಯವಾಗಿ ಉದ್ಯೋಗ ಲಭಿಸುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೈಗಾರಿಕೆಗಳ ಸ್ಥಾಪನೆಯಿಂದ ರಾಜ್ಯದ ಆರ್ಥಿಕ ಪ್ರಗತಿ ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಲಭಿಸುತ್ತದೆ. ಜಿಲ್ಲೆಯಲ್ಲಿ ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಘಟಕಗಳು ಸ್ಥಾಪನೆಯಾದಲ್ಲಿ ಅಲ್ಲಿನವರಿಗೆ ಉದ್ಯೋಗ ದೊರೆಯುತ್ತದೆ. ಅದರಿಂದ ಉದ್ಯೋಗ ಅರಸಿ ಹೊರ ಜಿಲ್ಲೆಗಳಿಗೆ ತೆರಳುವುದು ಕಡಿಮೆಯಾಗುತ್ತದೆ.
ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಹೆಚ್ಚು ಒತ್ತುನೀಡಬೇಕು ಎಂದರು.
ಜಿಲ್ಲೆಯ ಐ.ಟಿ.ಐ, ಡಿಪ್ಲೋಮಾ, ಜಿ.ಟಿ.ಟಿ.ಸಿ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಿಗೆ ಅಗತ್ಯವಿರುವ ತರಬೇತಿ ಕೋರ್ಸ್'ಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿಯೇ ಪ್ರಾರಂಭಿಸಬೇಕು. ಇಲ್ಲಿನ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಮಾಡಲು ಅವಕಾಶ ಕಲ್ಪಿಸಬೇಕು. ವೃತ್ತಿಪರ ಕೋರ್ಸುಗಳು ಮುಗಿದ ನಂತರ ಕೈಗಾರಿಕಾ ಘಟಕಗಳಲ್ಲಿ ಅಪ್ರೆಂಟಿಸ್ಶಿಪ್ ತರಬೇತಿಗಳನ್ನೂ ವಿದ್ಯಾರ್ಥಿಗಳಿಗೆ ನೀಡಬೇಕು. ಅದರಿಂದ ಯುವಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಜಿಲ್ಲೆಯಲ್ಲಿ 37 ಸಣ್ಣ ಪ್ರಮಾಣದ ಕೈಗಾರಿಕೆಗಳಲ್ಲಿ ಶೇ. 91.8ರಷ್ಟು, 47 ಮಧ್ಯಮ ಪ್ರಮಾಣದ ಕೈಗಾರಿಕೆಗಳಲ್ಲಿ ಶೇ. 95.1 ಹಾಗೂ 7 ಬೃಹತ್ ಕೈಗಾರಿಕೆಗಳಲ್ಲಿ ಶೇ. 92.4 ಸೇರಿದಂತೆ ಒಟ್ಟು 91 ಘಟಕಗಳಲ್ಲಿ ಶೇ. 93.7ರಷ್ಟು ಉದ್ಯೋಗ ಕಲ್ಪಿಸಲಾಗಿದೆ ಎಂದರು.
ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ ಮತ್ತು ಕೆರೆಬೆಟ್ಟುನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101.19 ಎಕ್ರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಭೂಸ್ವಾಧೀನ ಮತ್ತಿತರ ಪ್ರಕ್ರಿಯೆಗಳನ್ನು ಆದ್ಯತೆಯ ಮೇಲೆ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು.
ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಹಂಚಿಕೆಯಾಗಿ ಮೂರು-ನಾಲ್ಕು ವರ್ಷ ಕಳೆದರೂ ಪೂರ್ಣ ಪ್ರಮಾಣದಲ್ಲಿ ಉದ್ದಿಮೆದಾರರು ಉದ್ದಿಮೆ ಪ್ರಾರಂಭಿಸದೇ ಪ್ರತೀ ಸಭೆಯಲ್ಲಿಯೂ ಕಾಲಾವಕಾಶ ಕೋರಿ ಸಭೆಯ ಸಮಯವನ್ನು ವ್ಯರ್ಥ ಮಾಡುತ್ತಿರುವುದು ಸರಿಯಲ್ಲ. ಮುಂದಿನ ಎರಡು ತಿಂಗಳೊಳಗಾಗಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಪಡೆದಿರುವವರು ಘಟಕಗಳನ್ನು ಸ್ಥಾಪಿಸಬೇಕು. ತಪ್ಪಿದ್ದಲ್ಲಿ ನಿವೇಶನವನ್ನು ಇತರರಿಗೆ ಹಂಚಿಕೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್ ಮೊದಲಾದವರಿದ್ದರು.