ಪರಿಸರ ರಕ್ಷಣೆಯ ಜಾಗೃತಿ ಮೂಡಿಸುವಲ್ಲಿ ಮಾಧ್ಯಮದ ಪಾತ್ರ ಹಿರಿದು

ಲೋಕಬಂಧು ನ್ಯೂಸ್ | ಉಡುಪಿ, ಜೂ.19
ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾದ ಆಚರಣೆಯಲ್ಲ. ಪ್ರತಿದಿನ ಮಾಡಬೇಕಾದ ಕಾರ್ಯ. ಗಿಡ ನೆಟ್ಟರೆ ಸಾಲದು, ಅದನ್ನು ಪ್ರತಿದಿನ ಪೋಷಿಸಬೇಕು. ಅದೇ ರೀತಿ ಪರಿಸರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡಬೇಕು. ಅದರಲ್ಲಿ ಮಾಧ್ಯಮದವರ ಪಾತ್ರ ಬಹಳ ಮುಖ್ಯ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ. ಹೇಳಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆಯನ್ನು ಪತ್ರಿಕಾ ಭವನದ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿ, ಮಾತನಾಡಿದರು.


ಸಮಗ್ರ ಪರಿಸರ ವ್ಯವಸ್ಥೆಯ ಪ್ರತಿಯೊಂದೂ ಬಹಳ ಮುಖ್ಯ. ಒಂದು ಅಳಿದರೂ ಅದರ ಪ್ರಾಮುಖ್ಯತೆ ನಮಗೆ ಅರ್ಥವಾಗುತ್ತದೆ. ಹಾಗಾಗಿ ನಾವು ಇಡೀ ಪರಿಸರ ವ್ಯವಸ್ಥೆಯನ್ನು ಕಾಪಾಡಬೇಕು.


ಈ ಬಾರಿ ಮುಂಗಾರು ತುಂಬಾ ಕ್ಷೀಣಿಸಿ ಶೇ.60ರಷ್ಟು ಮಳೆ ಕಡಿಮೆ ಆಗಿದೆ. ಅದಕ್ಕೆ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯೇ ಕಾರಣ. ಆದ್ದರಿಂದ ಪರಿಸರ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು.


ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅಧ್ಯಕ್ಷತೆ ವಹಿಸಿದ್ದರು.


ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿದರು.


ಸಂಘದ ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶೀರೂರು, ಪತ್ರಿಕಾ ಭವನ ಸಮಿತಿ ಸಹಸಂಚಾಲಕ ಗಣೇಶ್ ಕಲ್ಯಾಣಪುರ, ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.


ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ, ಸದಸ್ಯ ಅಜಿತ್ ಆರಾಡಿ ವಂದಿಸಿದರು. ಯಶೋದಾ ಕೇಶವ ಕಾರ್ಯಕ್ರಮ ನಿರೂಪಿಸಿದರು.


ಪತ್ರಿಕಾ ಭವನದ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ಸಹಕರಿಸಿದರು.
ಬಳಿಕ ಸಿವರಾಮ್ ಬಾಬು ಜೊತೆ ಮಾಧ್ಯಮ ಸಂವಾದ ನಡೆಯಿತು.