ಲೋಕಬಂಧು ನ್ಯೂಸ್ ಮಂಗಳೂರು, ಜು.31
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 1ರಂದು ಶನಿವಾರ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.ಜಿಲ್ಲಾಧಿಕಾರಿ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜು, ಡಿಪ್ಲೋಮಾ ಮತ್ತು ಐಟಿಐ ಹಾಗೂ ಎಲ್ಲಾ ವಸತಿ ಶಾಲಾ- ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚುವರಿ ಜಾಗ್ರತೆ ವಹಿಸುವಂತೆ ಕೋರಲಾಗಿದೆ.