ಶಾಸಕರ ಕಚೇರಿಗೆ ಮುತ್ತಿಗೆ ಯತ್ನ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಲೋಕಬಂಧು ನ್ಯೂಸ್ | ಉಡುಪಿ, ಜು.30
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ದ್ವೇಷಭಾಷಣ ಮಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದುಕೊಂಡರು.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಪ್ರತಿಭಟನೆ ಹಾಗೂ ಶಾಸಕರ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿ, ನಗರದ ಜೋಡುಕಟ್ಟೆ ಹಾಗೂ ಶಾಸಕ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.


ಈಮಧ್ಯೆ ಶಾಸಕರ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ಕೂಡಾ ಜಮಾಯಿಸಿದ್ದರು. ಅದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.


ಜೋಡುಕಟ್ಟೆಗೆ ಆಗಮಿಸಿದ ಯುವ ಕಾಂಗ್ರೆಸ್ ಮುಖಂಡರು ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಶಾಸಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.


ಆ ವೇಳೆ ಪೊಲೀಸರು ಯುವ ಕಾಂಗ್ರೆಸ್ ಮುಖಂಡರನ್ನು ತಡೆದು ವಶಕ್ಕೆ ಪಡೆದುಕೊಂಡರು. ಇತ್ತ ಶಾಸಕರ ಕಚೇರಿಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಕೂಡಾ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.