ಲೋಕಬಂಧು ನ್ಯೂಸ್ ಉಡುಪಿ, ಜು.23
ಪ್ರಜಾಪ್ರಭುತ್ವ ದೇಶದಲ್ಲಿ ಪ್ರಜೆಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ. ದೆಹಲಿಯಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯ ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಹೇಳಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಸಮಸ್ಯೆಯನ್ನು ಪರಿಹರಿಸಲು ಚರ್ಚೆ ಮತ್ತು ಮಾತುಕತೆ ನಡೆಯಬೇಕು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಳಿಕ ದೇಶದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಆ ವಿಚಾರವಾಗಿ ಸಂಸತ್'ನಲ್ಲೂ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ಬಂಧಿಸಿರುವುದು ಖಂಡನೀಯ ಎಂದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದರ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ರಾಜೀನಾಮೆ ನೀಡಬೇಕು ಎಂದು ಭಂಡಾರಿ ಒತ್ತಾಯಿಸಿದರು.
ಎಸ್ಐಆರ್'ಗೆ ಸಹಕಾರ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಜನರನ್ನು ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿರುವುದು ನಮ್ಮಲ್ಲಿ ಸಂಶಯ ಉಂಟುಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ಹೂಡಿದ ಸಂಚನ್ನು ಕರ್ನಾಟಕದಲ್ಲೂ ಪ್ರಯತ್ನಿಸಲಾಗುತ್ತಿದೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ಯಾವುದೇ ಒಬ್ಬ ಮತದಾರ ಮತದಾನದ ಹಕ್ಕಿನಿಂದ ಹೊರಗುಳಿಯಬಾರದು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಬೂತ್'ಗಳಿಗೆ ತೆರಳಿ ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.
ಅಯೋಧ್ಯೆಯ ರಾಮ ಮಂದಿರದಲ್ಲಿ ಹುಂಡಿಗೆ ಕೈಹಾಕಿರುವ ಪ್ರಕರಣದ ನೈತಿಕ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಸಾದರಾಜ್ ಕಾಂಚನ್, ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ರಮೇಶ್ ಕಾಂಚನ್, ಹರೀಶ್ ಕಿಣಿ ಉಪಸ್ಥಿತರಿದ್ದರು.
