ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಕೋಟಿ ಅನುದಾನ

ಲೋಕಬಂಧು ನ್ಯೂಸ್ ಬೆಳಗಾವಿ, ಜು.9
ಮುಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಗ್ರಾಮೀಣ ಪ್ರದೇಶದ ಎಲ್ಲಾ ಶಾಸಕರಿಗೆ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು. ಸರಕಾರದ ಮಾರ್ಗಸೂಚಿ ಪ್ರಕಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅನುದಾನ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಮಳೆ ಕಡಿಮೆಯಾಗಿರುವ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು. ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸಿ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.


ಶಾಸಕರ ಮನವಿ ಮೇರೆಗೆ ಮೋಡ ಬಿತ್ತನೆಗೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.


ಯಾವುದೇ ಇಲಾಖೆ ವತಿಯಿಂದ ರಸ್ತೆ ಕಾಮಗಾರಿ ಆರಂಭಿಸುವ ಮುನ್ನ ಹಾಗೂ ನಂತರದ ಫೋಟೊ ದಾಖಲೆಗಳ ಸಮೇತ ಬಿಲ್ ಮಾಡಬೇಕು. ಯಾವುದೇ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿರುವ ಫೋಟೊ ದಾಖಲೆ ಇಟ್ಟಿರಬೇಕು. ನಕಲಿ ದಾಖಲೆ ಸೃಷ್ಟಿಸಿ ಬಿಲ್ ಪಡೆದಿರುವುದು ಕಂಡುಬಂದಲ್ಲಿ ಅಂಐವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.