ಲೋಕಬಂಧು ನ್ಯೂಸ್ | ಉಡುಪಿ, ಜು.30
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶಪಾಲ್ ಸುವರ್ಣ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಜುಲೈ 31ರಂದು ಜಟ್ಕಾ ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಭಟನೆ ವೇಳೆ ಗೌರವಯುತ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಶಾಸಕ ಯಶಪಾಲ್ ಸುವರ್ಣ ಅವರು ಬಳಸಿರುವ ಕಳಪೆ ಹಾಗೂ ಆಕ್ಷೇಪಾರ್ಹ ಭಾಷೆ ಖಂಡನೀಯ. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.
ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸೌಜನ್ಯದ ರಾಜಕೀಯ ಕಾಪಾಡುವ ಉದ್ದೇಶದಿಂದ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಜ್ಯೋತಿ ಹೆಬ್ಬಾರ್, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ ಹಾಗೂ ಹರೀಶ್ ಕಿಣಿ ಅಲೆವೂರು ಉಪಸ್ಥಿತರಿದ್ದರು.
