ಲೋಕಬಂಧು ನ್ಯೂಸ್ | ಉಡುಪಿ, ಜು.6
ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಿರ್ಮಾಣಗೊಂಡಿರುವ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡವನ್ನು ಶೀಘ್ರದಲ್ಲೇ ಉದ್ಘಾಟಿಸಲು ಕ್ರಮ ಕೈಗೊಳ್ಳಲಾಗುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅಲೆವೂರಿನ ಕೇಂದ್ರೀಯ ವಿದ್ಯಾಲಯಕ್ಕೆ ಸೋಮವಾರ ಭೇಟಿ ನೀಡಿ, ಸುಮಾರು 28 ಕೋಟಿ ರೂ. ವೆಚ್ಚದ ಕಟ್ಟಡ ಕಾಮಗಾರಿ ಪರಿಶೀಲಿಸಿದರು.
ಪ್ರತಿಯೊಂದು ತರಗತಿ ಕೊಠಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಶಾಲೆಯಲ್ಲಿ ಕಲಿಕಾ ವಾತಾವರಣ, ವಿದ್ಯಾರ್ಥಿಗಳ ಯೋಗಕ್ಷೇಮ, ಶೈಕ್ಷಣಿಕ ಚಟುವಟಿಕೆ ಹಾಗೂ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದು, ಪ್ರಸ್ತುತ ಶಾಲೆಯಲ್ಲಿ 1ರಿಂದ 10ನೇ ತರಗತಿ ವರೆಗೆ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ 1ರಿಂದ 5ನೇ ತರಗತಿ ವರೆಗೆ ಹೆಚ್ಚುವರಿ ತರಗತಿಗಳಿಗೆ ಅನುಮೋದನೆ ದೊರೆತಿದ್ದು ಅವುಗಳ ತರಗತಿಗಳೂ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರೀಯ ವಿದ್ಯಾಲಯಕ್ಕೆ ದಾಖಲಾತಿ ಮಾಡಿಸುವ ಮೂಲಕ ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ಸಂಸದರು ವಿನಂತಿಸಿದರು.
ಪ್ರಭಾರ ಪ್ರಾಂಶುಪಾಲ ವಸಂತ ಅವರು ಮಣಿಪಾಲದಿಂದ ಅಲೆವೂರು ಕೇಂದ್ರಿಯ ವಿದ್ಯಾಲಯ ವರೆಗೆ ಬಸ್ ವ್ಯವಸ್ಥೆ, ಜನರೇಟರ್ ವ್ಯವಸ್ಥೆ, ಮೇಲ್ಛಾವಣಿ ಹಾಗೂ ಸಂಪರ್ಕ ರಸ್ತೆ ದುರಸ್ತಿ ಕುರಿತಂತೆ ಸಂಸದರ ಗಮನಕ್ಕೆ ತಂದರು.
ಇಂಜಿನಿಯರ್ ಸತೀಶ್ ರಾವ್ ಇದ್ದರು.
