ಲೋಕಬಂಧು ನ್ಯೂಸ್ | ಉಡುಪಿ, ಜು.31
ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿದ್ದು ಆ ಬಗ್ಗೆ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆ ಸಂಬಂಧ ಬುಧವಾರ ಉಡುಪಿ ನಗರ ಪೊಲೀಸರು ಶಾಸಕರ ನಿವಾಸಕ್ಕೆ ತೆರಳಿ ನೋಟಿಸು ನೀಡಿದ್ದರು. ಅದರಂತೆ ಶಾಸಕ ಯಶಪಾಲ್ ಸುವರ್ಣ ನಗರ ಠಾಣೆಗೆ ಹಾಜರಾಗಿದ್ದು ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಾಸಕರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದು ಅದಕ್ಕೆ ಅವರು ಉತ್ತರಿಸಿದ್ದಾರೆ ಎನ್ನಲಾಗಿದೆ.
ರಾತ್ರಿ 8.25ಕ್ಕೆ ಠಾಣೆಗೆ ಆಗಮಿಸಿದ ಅವರು ಸುಮಾರು ಒಂದು ಗಂಟೆ ಕಾಲ ವಿಚಾರಣೆಗೊಳಗಾಗಿದ್ದು ರಾತ್ರಿ 9:30ರ ಸುಮಾರಿಗೆ ಠಾಣೆಯಿಂದ ವಾಪಸ್ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಶಾಸಕ ಯಶಪಾಲ್ ಸುವರ್ಣ ತನಿಖಾಧಿಕಾರಿ ಮುಂದೆ ಹಾಜರಾಗಿದ್ದು, ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಶಾಸಕರು ನೀಡಿರುವ ಉತ್ತರಗಳ ಆಧಾರದ ಮೇಲೆ ಮುಂದಿನ ತನಿಖೆ ಮುಂದುವರಿಯಲಿದೆ ಎಂದು ಎಸ್.ಪಿ. ಹರಿರಾಮ್ ಶಂಕರ್ ತಿಳಿಸಿದ್ದಾರೆ.
.jpg)
.jpg)