ಲೋಕಬಂಧು ನ್ಯೂಸ್ | ಬೆಂಗಳೂರು, ಜು.7
ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆ ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಜುಲೈ 8ರಂದು ರೆಡ್ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ.
ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಸೇರಿದಂತೆ ಮಳೆಯ ತೀವ್ರತೆ ಹೆಚ್ಚಿರುವ ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಆರು ಜಿಲ್ಲೆಯ ಒಂದು ಅಥವಾ ಎರಡು ಕಡೆಗಳಲ್ಲಿ 204.4 ಮಿ.ಮೀ ಮಳೆಯಾಗುವ ಸೂಚನೆಯಿದ್ದು, ಗಂಟೆಗೆ 50ರಿಂದ 60 ಕಿ.ಮೀ. ವೇಗದ ಗಾಳಿ ಬೀಸಲಿದೆ.
ಅಲ್ಲದೆ, ಜುಲೈ 11ರ ವರೆಗೆ ರಾಜ್ಯದ ಘಟ್ಟ ಪ್ರದೇಶದ ಒಂದು ಅಥವಾ ಎರಡು ಕಡೆಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ.