ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣೆ

ಲೋಕಬಂಧು ನ್ಯೂಸ್ | ಉಡುಪಿ, ಜು.4
ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಶ್ರಮ ಮತ್ತು ಆದರ್ಶಗಳ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಈ ಮಟ್ಟಕ್ಕೆ ಬೆಳೆದು ನಿಲ್ಲಲು ಸಾಧ್ಯವಾಗಿದೆ. ಡಾ.ಮುಖರ್ಜಿ ಜೀವನಾದರ್ಶ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನಿರಂತರ ಪ್ರೇರಣೆ ಹಾಗೂ ಶಕ್ತಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಭಾರತೀಯ ಜನಸಂಘ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ 125ನೇ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ `ಸ್ಮರಣ ಪಾಕ್ಷಿಕ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯಾದ್ಯಂತ ಜುಲೈ 6ರ ವರೆಗೆ ಡಾ.ಮುಖರ್ಜಿ ಸ್ಮರಣಾರ್ಥ 'ಸ್ಮರಣ ಪಾಕ್ಷಿಕ' ಚಾಲ್ತಿಯಲ್ಲಿದ್ದು, ಜು. 6ರಂದು ಜಿಲ್ಲೆಯ ಎಲ್ಲಾ ಮಂಡಲಗಳ ಕಚೇರಿಗಳು ಹಾಗೂ 1,111 ಬೂತ್'ಗಳಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಜನ್ಮ ದಿನಾಚರಣೆ, ಸಂಸ್ಮರಣೆ ಹಾಗೂ ವೃಕ್ಷಾರೋಪಣ ಕಾರ್ಯಕ್ರಮ ನಡೆಯಲಿದೆ ಎಂದರು.


ಪಕ್ಷದ ಸಾಂಘಿಕ ಕೆಲಸ ಕಾರ್ಯಗಳ ಕುರಿತು ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂದರ್ಭ ಕಡ್ಡಾಯವಾಗಿ ವಿಮರ್ಶೆ ನಡೆಸುವ ಕಾರ್ಯವಾಗಬೇಕು. ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನರ್ಹರು ಮತದಾರರ ಪಟ್ಟಿಯೊಳಗೆ ಸೇರ್ಪಡೆಯಾಗದಂತೆ ಜಾಗ್ರತೆ ವಹಿಸಬೇಕು ಎಂದರು.


ವಿಶೇಷ ಉಪನ್ಯಾಸ ನೀಡಿದ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಅವರು ಡಾ.ಮುಖರ್ಜಿ ಜೀವನ ಮತ್ತು ರಾಷ್ಟ್ರಕ್ಕೆ ಅವರ ಕೊಡುಗೆಗಳ ಕುರಿತು ಮಾಹಿತಿ ನೀಡಿದರು.


ಶಾಸಕ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ನಾಯಕ್ ಮೊದಲಾದವರಿದ್ದರು.


ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಿಜಯ್ ಭಟ್ ಕಡೆಕಾರ್ ವಂದೇ ಮಾತರಂ ಗೀತೆ ಹಾಡಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕೊಡವೂರು ಸ್ವಾಗತಿಸಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ನಿರೂಪಿಸಿದರು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಂದಿಸಿದರು.