ನಾಗೋರಿ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ಲೋಕಬಂಧು ನ್ಯೂಸ್ ಮಂಗಳೂರು, ಜು.2
ನಗರದ ನಾಗೋರಿಯಲ್ಲಿ ಬುಧವಾರ ಬೆಳಗ್ಗಿನ ಜಾವ ಸಂಭವಿಸಿದ ಪ್ರಾಕೃತಿಕ ದುರಂತದಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ.ಖಾದರ್ ಅವರು ಆರೋಗ್ಯ ಇಲಾಖೆಯ ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದರು. ಈ ಘಟನೆಯ ಮಾಹಿತಿ ತಿಳಿದ ಕೂಡಲೇ ದೆಹಲಿ ಭೇಟಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ ಬುಧವಾರ ಸಂಜೆ ಮಂಗಳೂರಿಗೆ ಆಗಮಿಸಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ, ಜಿಲ್ಲಾಡಳಿತ ಕೈಗೊಂಡ ರಕ್ಷಣಾ ಕಾರ್ಯ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.


ಘಟನೆಯಲ್ಲಿ ಬಿಹಾರ ಮೂಲದ ಇಬ್ಬರು ಮಕ್ಕಳು ಹಾಗೂ ಉಡುಪಿ ಮೂಲದ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಮೊತ್ತವನ್ನು ಪ್ರಾಕೃತಿಕ ವಿಕೋಪ ನಿಧಿಯಿಂದ ಕೂಡಲೇ ಪಾವತಿಸುವಂತೆ ಸಚಿವ ಖಾದರ್ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಗಾಯಗೊಂಡವರಿಗೆ ಸರ್ಕಾರದ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡುವಂತೆಯೂ ಸೂಚಿಸಿದರು.