ಲೋಕಬಂಧು ನ್ಯೂಸ್ | ಉಡುಪಿ, ಜು.23
ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ರಾಜಕೀಯ ಉದ್ದೇಶಗಳಿರುವ ಸಾಧ್ಯತೆ ಇದೆ ಎಂದು ಮಾಜಿ ಡಿವೈಎಸ್ಪಿ ಹಾಗೂ ಭಾರತೀಯ ಜನಶಕ್ತಿ ಕಾಂಗ್ರೆಸ್‌ನ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂಬ ಅನುಮಾನ ಇದೆ. ಪ್ರತಿಭಟನೆಯ ಹಿಂದಿನ ಉದ್ದೇಶ ಹಾಗೂ ಅದರ ಸಮಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಪ್ರಶ್ನೆಗಳು ಮೂಡಿವೆ. ರಾಜಕೀಯ ಲಾಭಕ್ಕಾಗಿ ಕೆಲವು ಬೆಳವಣಿಗೆಗಳನ್ನು ಬಳಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದರು.
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ವಿಚಾರ ಪ್ರಸ್ತಾಪಿಸಿದ ಅವರು, ರಾಜ್ಯದಲ್ಲಿ ಹಿಂದೆ ನಡೆದ ಪಿಎಸ್ಐ ಹಾಗೂ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸಂದರ್ಭಗಳಲ್ಲಿ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಿದ್ದರೇ ಎಂದು ಪ್ರಶ್ನಿಸಿದರು.
ಅದೇ ರೀತಿ, ಪ್ರತಿವರ್ಷ ಎಸ್ಎಸ್ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಪ್ರಕರಣಗಳ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಎಷ್ಟು ಬಾರಿ ರಾಜೀನಾಮೆ ನೀಡಿದ್ದಾರೆ ಎಂದು ಅನುಪಮಾ ಪ್ರಶ್ನಿಸಿದರು.
ಎಸ್ಎಸ್ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಅನಿವಾರ್ಯವಾಗಿದ್ದರೆ ನೀಟ್ ಪರೀಕ್ಷೆಗೆ ಪರ್ಯಾಯವಾಗಿ ಹಲವು ಕೋರ್ಸ್'ಗಳು ಹಾಗೂ ವೃತ್ತಿ ಮಾರ್ಗಗಳಿವೆ. ಪೋಷಕರು ತಮ್ಮ ಮಕ್ಕಳು ವೈದ್ಯರಾಗಲೇಬೇಕು ಎಂಬ ಒತ್ತಡ ಹೇರಬಾರದು. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾದ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಅನುಪಮಾ ಶೆಣೈ ಸಲಹೆ ನೀಡಿದರು.
