ಲೋಕಬಂಧು ನ್ಯೂಸ್ | ಉಡುಪಿ, ಜು.22
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಬ್ರಹ್ಮಗಿರಿ ಸರ್ಕಲ್'ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೆಲಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳನ್ನು ಬಂಧಿಸಿರುವುದು ಖಂಡನೀಯ. ಈ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಸರಿಯಲ್ಲ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೂಂಡಾಗಳನ್ನು ಬಳಸಿಕೊಂಡು ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರಕ್ಕೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಮೊದಲಾದವರು ಭಾಗವಹಿಸಿದ್ದರು.
