ಲೋಕಬಂಧು ನ್ಯೂಸ್ | ಉಡುಪಿ, ಜು.29
ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಶಾಸಕರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿದ್ದು ಶಾಸಕರು ಅದನ್ನು ಬುಧವಾರ ಸ್ವೀಕರಿಸಿದರು.
ಅದ್ದೂರಿ ಸ್ವಾಗತ
ಅದಕ್ಕೂ ಮೊದಲು ತಾಲೂಕು ಕಚೇರಿ ಬಳಿಯ ಶಾಸಕರ ಕಚೇರಿಗೆ ಪೋಲಿಸರು ಬರುವುದಾಗಿ ಮಾಹಿತಿ ಇದ್ದು ಕಚೇರಿಗೆ ಆಗಮಿಸಿದ ಶಾಸಕ ಯಶಪಾಲ್ ಸುವರ್ಣ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ಇತ್ತೀಚೆಗೆ ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು ಹಾಗೂ ಬಾಬರಿ ಮಸೀದಿ ಉಲ್ಲೇಖಿಸಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ದೂರು ನೀಡಿತ್ತು. ಅದರಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ದ್ವೇಷ ಭಾಷಣ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದ ಬಳಿಕ ಪೊಲೀಸರು ನೋಟಿಸ್ ನೀಡಲು ಶಾಸಕರ ಕಚೇರಿಗೆ ಆಗಮಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಹರಡಿದ್ದರಿಂದ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಕಚೇರಿ ಬಳಿ ಜಮಾಯಿಸಿ ಶಾಸಕರಿಗೆ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮುಖಂಡರು ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು ಕಾರ್ಯಕರ್ತರಿಗೆ ಬೆಂಬಲ ನೀಡಿದರು.
ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರ ಜಮಾವಣೆಯ ನಡುವೆಯೂ ಪೊಲೀಸರು ನೋಟಿಸ್ ನೀಡಲು ಕಚೇರಿಗೆ ಆಗಮಿಸದೆ ಶಾಸಕರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ಮೀರಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಇತರ ವಿಷಯಗಳನ್ನೂ ಪ್ರಸ್ತಾಪಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಮಂದಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ಆರೋಪಿಸಿದ ಅವರು, ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ಬಗ್ಗೆ ಕಾಂಗ್ರೆಸ್ ಮಾಹಿತಿ ಪಡೆದುಕೊಳ್ಳಲಿ ಎಂದು ಸವಾಲೆಸೆದರು.
ರಾಹುಲ್ ಗಾಂಧಿ ಅವರು ಸದಾ ವಿದೇಶ ಪ್ರವಾಸದಲ್ಲಿರುತ್ತಾರೆ. ದೆಹಲಿ ಪ್ರತಿಭಟನೆ ವೇಳೆ ಕಾಂಗ್ರೆಸ್ ಹೀನಾಯವಾಗಿ ವರ್ತಿಸಿದ್ದು, ಇಂದು ಸಂಸತ್ತಿನಲ್ಲಿ 'ಈಡಿಯಟ್' ಎಂಬ ಪದ ಬಳಕೆ ಮಾಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಗೌರವ ತರುವ ವಿಷಯವಲ್ಲ. ಮೊದಲು ಕಾಂಗ್ರೆಸ್ ತನ್ನದೇ ಪಕ್ಷದ ನಾಯಕರನ್ನು ತಿದ್ದಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಯಶಪಾಲ್, ಉಡುಪಿ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಮರ್ಪಕ ಅನುದಾನ ದೊರೆಯುತ್ತಿಲ್ಲ. ಶಾಲಾ ಕಟ್ಟಡಗಳು ಸೋರುತ್ತಿದ್ದು, ಅಂಗನವಾಡಿಗಳಲ್ಲಿ ಮೊಟ್ಟೆ ವಿತರಣೆ ಕೂಡಾ ಸ್ಥಗಿತಗೊಂಡಿದೆ. ಕರಾವಳಿ ಭಾಗಕ್ಕೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ತನ್ನ ವಿರುದ್ಧ ಮಾಜಿ ಸಚಿವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಸಹಜ. ಆದರೆ, ಇದರಿಂದ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಶಕ್ತಿ ಮತ್ತೊಮ್ಮೆ ಸಾಬೀತಾಗಿದೆ ಎಂದವರು ಹೇಳಿದರು.
ಸಿದ್ಧಾಂತದಲ್ಲಿ ರಾಜೀ ಇಲ್ಲ
ಸಿದ್ಧಾಂತದ ವಿಚಾರದಲ್ಲಿ ನಾನು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಮಣಿಪಾಲದಲ್ಲಿ ನಡೆದ ಪ್ರತಿಭಟನೆ ಕುರಿತು ಬಿಜೆಪಿ ಯುವ ಮೋರ್ಚಾ ಈಗಾಗಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರಗಳು ಶಾಶ್ವತವಲ್ಲ. ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನ್ಯಾಯಯುತವಾಗಿ ಕೆಲಸ ಮಾಡಬೇಕು. ಕಾಂಗ್ರೆಸ್ ನಾಯಕರಿಗೆ ಹೆದರಿ ಕರ್ತವ್ಯ ನಿರ್ವಹಿಸಬಾರದು ಎಂದು ಎಚ್ಚರಿಸಿದರು.
ಪ್ರತಿಭಟನೆ ವೇಳೆ ಪೊಲೀಸರನ್ನೂ ಅವಹೇಳನ ಮಾಡಲಾಗಿದ್ದು, ರಾಜಕೀಯ ಒತ್ತಡಗಳಿಂದ ಪೊಲೀಸರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಯಶಪಾಲ್ ಸುವರ್ಣ ಆರೋಪಿಸಿದರು.
ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಬಿಜೆಪಿ ಭದ್ರಕೋಟೆಗಳಲ್ಲಿರುವ ಶಾಸಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಪ್ರಕರಣಗಳನ್ನು ದಾಖಲಿಸುವ ಮೂಲಕ ಕಾರ್ಯಕರ್ತರ ಧೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಬಿಜೆಪಿ ಶಾಸಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದೀಗ ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧವೂ ದೂರು ದಾಖಲಿಸಿರುವುದು ಅದೇ ಧೋರಣೆಯ ಮುಂದುವರಿಕೆಯಾಗಿದೆ ಎಂದರು.
ಪ್ರಕರಣ ದಾಖಲಿಸುವ ಮೂಲಕ ಬಿಜೆಪಿ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸಲಾಗುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿ ನಾಯಕ ಸಿ.ಟಿ. ರವಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಆದರೆ, ಇಂಥ ಪ್ರಕರಣಗಳಿಗೆ ನಾವು ಹೆದರುವುದಿಲ್ಲ ಎಂದರು.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹಲವು ಪ್ರಕರಣಗಳಿದ್ದು, ಸರಿಯಾಗಿ ಪರಿಶೀಲಿಸಿದರೆ ಅವರ ವಿರುದ್ಧವೇ ರೌಡಿ ಶೀಟರ್ ತೆರೆಯಬೇಕಾದ ಪರಿಸ್ಥಿತಿ ಇದೆ. ಅಲ್ಲದೆ, ಅವರು ಉಮರ್ ಖಾಲಿದ್ ಬೆಂಬಲಿಗರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭರತ್ ಶೆಟ್ಟಿ ಆರೋಪಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು 'ಪಾಕಿಸ್ತಾನ ಶತ್ರು ರಾಷ್ಟ್ರವಲ್ಲ' ಎಂಬ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ ಅವರು, ಇದು ಕಾಂಗ್ರೆಸ್‌ನ ಮನೋಭಾವವನ್ನು ತೋರಿಸುತ್ತದೆ ಎಂದರು.
ಪ್ರಿಯಾಂಕ್ ಖರ್ಗೆ ಪ್ರತಿದಿನ ಬೆಳಿಗ್ಗೆ ಎದ್ದ ಕೂಡಲೇ ಆರ್.ಎಸ್.ಎಸ್. ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದ ಅವರು, ರಾಜ್ಯದ ಪೊಲೀಸ್ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಆದರೆ, ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಅವರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ರೀತಿಯ ಪದ ಬಳಸಲು ನನಗೂ ಬೇಸರವಾಗುತ್ತದೆ. ರಾಜಕೀಯ ಒತ್ತಡದ ಮೂಲಕ ಪ್ರಕರಣ ದಾಖಲಿಸಲಾಗುತ್ತಿದೆ. ಕಾಂಗ್ರೆಸ್ ಶಾಸಕರು ಏನೇ ಮಾತನಾಡಿದರೂ ಅವರ ವಿರುದ್ಧ ಪ್ರಕರಣ ದಾಖಲಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಎಲ್ಲ ಬೆಳವಣಿಗೆಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ತಿಳಿಸಿದ ಡಾ.ಭರತ್ ಶೆಟ್ಟಿ, ಈ ವಿಚಾರವನ್ನು ಸದನದ ಒಳಗೂ ಹೊರಗೂ ಬಿಜೆಪಿ ಹೋರಾಟದ ಮೂಲಕ ಪ್ರಸ್ತಾಪಿಸಲಿದೆ ಎಂದರು.
