ತಿಮರೋಡಿ ಗಡಿಪಾರು ಆದೇಶ ತಡೆಗೆ ಸುಪ್ರೀಂ ನಿರಾಕರಣೆ

ಲೋಕಬಂಧು ನ್ಯೂಸ್ ನವದೆಹಲಿ, ಜು.14
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ತಿಮರೋಡಿಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಲು ನಿರಾಕರಿಸಿದೆ.ಮಹೇಶ್ ತಿಮರೋಡಿ ಅಪರಾಧ ಹಿನ್ನೆಲೆ ಹೊಂದಿರುವುದು ಹಾಗೂ ನಿರಂತರವಾಗಿ ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ಉಪ ವಿಭಾಗಾಧಿಕಾರಿ ಗಡಿಪಾರು ಆದೇಶ ಹೊರಡಿಸಿದ್ದರು.


ಈ ಆದೇಶದ ಪ್ರಕಾರ, ಮಹೇಶ್ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಆ ಕ್ರಮವನ್ನು ಪ್ರಶ್ನಿಸಿ ತಿಮರೋಡಿ ಮೊದಲು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್ ಕೂಡ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.


ಬಳಿಕ ಮಹೇಶ್ ತಿಮರೋಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಗಡಿಪಾರು ಆದೇಶಕ್ಕೆ ತಡೆ ನೀಡುವಂತೆ ಮನವಿ ಮಾಡಿದ್ದರು. ಆದರೆ, ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದ್ದ‌ ಗಡಿಪಾರು ಆದೇಶಕ್ಕೆ ಯಾವುದೇ ಮಧ್ಯಂತರ ಪರಿಹಾರ ನೀಡಿಲ್ಲ.


ಸುಪ್ರೀಂ ಕೋರ್ಟ್‌ನ ಈ ನಿರ್ಧಾರದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ.