ಮನೆಯ ಮೇಲ್ಚಾವಣಿ ಕುಸಿದು ಮೂವರ ದುರ್ಮರಣ

ಲೋಕಬಂಧು ನ್ಯೂಸ್ | ಮಂಗಳೂರು, ಜು.1
ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ನಗರದ ನಾಗುರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಬಾಲಕಿಯರಾಗಿದ್ದು ಮೃತರನ್ನು ಅನಾಮಿಕ ಚೌರಾಸಿಯ (8) ಮತ್ತು ಪರಿ (4) ಹಾಗೂ ಶಾಂತ (46) ಎಂದು ಗುರುತಿಸಲಾಗಿದೆ. ಅಲ್ಕಾ (14), ಅನುಷಾ (11) ಮತ್ತು ಬಾಲಕೃಷ್ಣ (48) ರಕ್ಷಣಾ ಕಾರ್ಯದಲ್ಲಿ ಬದುಕಿಳಿದಿದ್ದಾರೆ.
ಮೂಲತಃ ಬಿಹಾರ ರಾಜ್ಯದವರಾಗಿದ್ದು ಪ್ರಸ್ತುತ ಕಂಕನಾಡಿ ಪೊಲೀಸ್ ಠಾಣಾ ಹಿಂಭಾಗದಲ್ಲಿ ಕಳೆದ 20 ವರ್ಷದಿಂದ ವಾಸಿಸುತ್ತಿದ್ದಾರೆ.


ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮೇಲ್ಚಾವಣಿಯ ಅವಶೇಷಗಳಡಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.


ಕಳೆದ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಹಳೆಯ ಮನೆಯ ಗೋಡೆಗಳು ಸಂಪೂರ್ಣ ತೇವಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.


ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ ನೀಡಿ ಘಟನೆಯ ಮಾಹಿತಿ ಪಡೆದರು.


ಸಚಿವ ಖಾದರ್ ಪ್ರವಾಸ ಮೊಟಕು
ದುರ್ಘಟನೆಯ ಸುದ್ದಿ ತಿಳಿಯುತ್ತಲೇ ದೆಹಲಿ ಪ್ರವಾಸದಲ್ಲಿದ್ದ ಆರೋಗ್ಯ ಸಚಿವ ಯು.ಟಿ. ಖಾದರ್ ಪ್ರವಾಸ ಮೊಟಕುಗೊಳಿಸಿದ್ದಾರೆ. ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ ಅವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದರು. ಗಾಯಾಳುಗಳಿಗೆ ಸರಕಾರದ ವತಿಯಿಂದ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ತಕ್ಷಣ ಪರಿಹಾರ ಮೊತ್ತ ನೀಡಲು ನಿರ್ದೇಶಿಸಿದರು.


ಸಚಿವ ಖಾದರ್ ಮಧ್ಯಾಹ್ನದ ವೇಳೆಗೆ ಮಂಗಳೂರು ತಲುಪಲಿದ್ದಾರೆ.