ಲೋಕಬಂಧು ನ್ಯೂಸ್ ಬ್ರಹ್ಮಾವರ, ಆ.24
ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿ ಹೆತ್ತ ತಾಯಿ ಮತ್ತು ತಂದೆಯನ್ನೇ ದುಷ್ಟ ಮಗನೋರ್ವ ಸುತ್ತಿಗೆಯಿಂದ ಬಡಿದು ಕೊಂದ ದಾರುಣ ಘಟನೆ ಬ್ರಹ್ಮಾವರದಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ. ಪೊಲೀಸರು ಮಗನನ್ನು ವಶಕ್ಕೆ ಪಡೆದಿದ್ದಾರೆ.ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ (31) ಬಂಧಿತ ಆರೋಪಿ. ಭಾನುವಾರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಮೆಹಬೂಬ್ ಹಾಗೂ ಅವರ ಪತ್ನಿ ಸಂಶದ್ ಬೇಗಂ ಅವರನ್ನು ಆರೋಪಿ ಶಾಹಿದ್ ಅಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ತಂದೆ-ತಾಯಿ ತನಗೆ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು. ಅದೇ ಕಾರಣಕ್ಕೆ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಶಾಹಿದ್ ಅಲಿ ಪೊಲೀಸರಿಗೆ ತಿಳಿಸಿದ್ದಾನೆ.
ಬೆಳಗ್ಗೆ ಸುಮಾರು 9 ಗಂಟೆಗೆ ಆರೋಪಿ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ತನ್ನ ತಂದೆ-ತಾಯಿಯನ್ನು ಕೊಲೆ ಮಾಡಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಎಸ್.ಪಿ. ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಹಿಂದಿರುವ ಇತರ ವಿಚಾರಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.