ಲೋಕಬಂಧು ನ್ಯೂಸ್ | ಕುಂದಾಪುರ, ಆ.7
ಯುವಕನೋರ್ವನನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯುವಕನನ್ನು ಮರಕ್ಕೆ ಕಟ್ಟಿಹಾಕಿದ್ದ ಫೋಟೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ದಲಿತ ದೌರ್ಜನ್ಯ ಪ್ರಕರಣ
ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ಆ.6ರಂದು ಮನೆಯೊಂದಕ್ಕೆ ನುಗ್ಗಿದ ಸನತ್ ಮೊಗವೀರ ಎಂಬಾತ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ನೊಂದ ಯುವತಿ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಅದರಂತೆ ಆರೋಪಿ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸನತ್ ನನ್ನು ಬಂಧಿಸಿದ್ದಾರೆ.
ಮರಕ್ಕೆ ಕಟ್ಟಿ ಹಲ್ಲೆ
ಅದಕ್ಕೂ ಮೊದಲು ಸನತ್ ಮನೆಗೆ ನುಗ್ಗಿದ ಸಂದರ್ಭ ನೊಂದ ಯುವತಿಯ ಕುಟುಂಬಸ್ಥರು ಆತನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಸನತ್ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಮತ್ತು ವಿವಿಧ ಸೆಕ್ಷನ್'ಗಳಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ತಂದೆ ರಾಮಕುಮಾರ್, ಸಹೋದರ ನಂದೀಶ್ ಎಂಬವರನ್ನು ಬಂಧಿಸಲಾಗಿದೆ. ಇತರ ಆರೋಪಿಗಳು ಪರಾರಿಯಾಗಿದ್ದಾರೆ. ಎರಡೂ ಪ್ರಕರಣಗಳು ತನಿಖೆಯಲ್ಲಿದ್ದು ಶೀಘ್ರದಲ್ಲಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
