ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ

ಲೋಕಬಂಧು ನ್ಯೂಸ್ | ಬೆಂಗಳೂರು, ಆ.31
ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ.
ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕರಾವಳಿ ಭಾಗದ ಪ್ರಮುಖ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ಅಗತ್ಯತೆ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುವ ನಿರೀಕ್ಷೆಯಿದೆ. ಕಸ್ತೂರಿ ರಂಗನ್ ವರದಿ, ಪ್ರವಾಸೋದ್ಯಮ ಅಭಿವೃದ್ಧಿ, ಮೂಲಸೌಕರ್ಯ ವೃದ್ಧಿ, ಕಾನೂನು ಮತ್ತು ಸುವ್ಯವಸ್ಥೆ, ಮಂಗಳೂರು ವಿಮಾನ ನಿಲ್ದಾಣದ ವಿಸ್ತರಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳು ಸಚಿವ ಸಂಪುಟದ ಮುಂದೆ ಬರಲಿವೆ. ಜೊತೆಗೆ ಕರಾವಳಿ ಭಾಗದ ಸಾಂಸ್ಕೃತಿಕ ಅಸ್ಮಿತೆಯಾಗಿರುವ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ವಿಚಾರವೂ ಚರ್ಚೆಗೆ ಬರುವ ಸಾಧ್ಯತೆಯಿದೆ.


ಇತ್ತೀಚೆಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಎರಡನೇ ಭಾಷೆಯನ್ನಾಗಿ ಘೋಷಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯತ್ತ ತುಳು ಭಾಷಾ ಹೋರಾಟಗಾರರು ಹಾಗೂ ಕರಾವಳಿ ಭಾಗದ ಜನತೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.


ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುವುದು ಖಚಿತವಾಗಿದ್ದರೂ ಸಭೆ ನಡೆಯುವ ಸ್ಥಳ ಇನ್ನೂ ಅಂತಿಮಗೊಂಡಿಲ್ಲ.