ರಸ್ತೆ ಅಪಘಾತದಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ದುರ್ಮರಣ

ಲೋಕಬಂಧು ನ್ಯೂಸ್ | ಉಡುಪಿ, ಆ.1
ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮಣಿಪಾಲದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಭೆ ಪೂರೈಸಿ, ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಉಡುಪಿ ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿ, ಅಲ್ಲಿಂದ ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು.


ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.


ಅವರು ಪತಿ ಬಿಜೆಪಿ ಮುಂದಾಳು ಮಂಜುನಾಥ ಕೊಳ ಹಾಗೂ ಈರ್ವರು ಮಕ್ಕಳನ್ನು ಅಗಲಿದ್ದಾರೆ.


ಸಂತಾಪ
ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು‌ ನವೀನ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್ ಸುವರ್ಣ, ಸುನಿಲ್ ಕುಮಾರ್, ಗುರ್ಮೆ ಸುರೇಶ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ‌ ಮತ್ತು ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಹಿತ ಪಕ್ಷದ ಮುಖಂಡು ಸಂತಾಪ ವ್ಯಕ್ತಪಡಿಸಿದ್ದಾರೆ‌.