ಲೋಕಬಂಧು ನ್ಯೂಸ್ | ಕುಂದಾಪುರ, ಆ.21
'ಕನ್ನಡಪ್ರಭ' ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದು, ಆ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯನಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಒಳರೋಗಿಗಳಿಂದ ಚಿಕಿತ್ಸೆ ಸಮಯ ಹಣ ಪಡೆಯುತ್ತಿರುವ ಬಗ್ಗೆ ಪತ್ರಿಕೆಯಲ್ಲಿ ವರದಿ ಪ್ರಕಟಿಸಿರುವ ವಿಚಾರದಲ್ಲಿ ದ್ವೇಷದಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿರುವುದಾಗಿ ಶ್ರೀಕಾಂತ ಅವರು ದೂರಿನಲ್ಲಿ ತಿಳಿಸಿದ್ದಾರೆ.
ತನಿಖೆ ನಡೆಸಿ, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪತ್ರಕರ್ತರ ಸಂಘ ಖಂಡನೆ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲೆ ನಡೆದ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ.
ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
