ಲೋಕಬಂಧು ನ್ಯೂಸ್ | ಗದಗ, ಆ.5
ರಾಜ್ಯ ಸಚಿವ ಸಂಪುಟ ಪುನಾರಚನೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹಾಗೂ ಗದಗ ಶಾಸಕ ಡಾ.ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಪಕ್ಷದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ಹಾಗೂ ಮುಖಂಡರು ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯ ರಾಜಕೀಯದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಹಾಗೂ ಆಡಳಿತಾತ್ಮಕ ಅನುಭವ ಹೊಂದಿರುವ ಡಾ. ಎಚ್.ಕೆ. ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಗದಗ ಜಿಲ್ಲೆಯ ಜನತೆಗೆ ಮಾಡಿರುವ ಘೋರ ಅನ್ಯಾಯ ಎಂದು ಕಿಡಿಕಾರಿದರು.
22 ನಗರಸಭೆ ಸದಸ್ಯರ ಸಾಮೂಹಿಕ ರಾಜೀನಾಮೆ
ಪ್ರತಿಭಟನೆಯ ಪ್ರಮುಖ ಬೆಳವಣಿಗೆಯಾಗಿ ಗದಗ ನಗರಸಭೆಯ 22 ಮಂದಿ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದರು.
ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಸದಸ್ಯರು, ಡಾ. ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ನಗರಸಭೆ ಸದಸ್ಯರ ಈ ನಡೆ ಜಿಲ್ಲೆಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
