ಲೋಕಬಂಧು ನ್ಯೂಸ್ ಉಡುಪಿ, ಆ.30
ಅದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾದಿನವನ್ನಾಗಿ ಆಚರಿಸಲಾಗುತ್ತಿದ್ದು, ಧ್ಯಾನ್ ಚಂದ್ ಜೀವನದ ಸಾಧನೆಗಳನ್ನು ಯುವ ಕ್ರೀಡಾಪಟುಗಳಿಗೆ ತಿಳಿಸುವ ಉದ್ದೇಶದಿಂದ ಈ ದಿನವನ್ನು ರಾಷ್ಟ್ರದಾದ್ಯಂತ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ ಯುವ ಕ್ರೀಡಾಳುಗಳು ಮೇಜರ್ ಧ್ಯಾನ್ ಚಂದ್ ಅವರ ಸಾಧನೆಯಿಂದ ಸ್ಫೂರ್ತಿ ಪಡೆದು ಒಲಂಪಿಕ್ಸ್'ನಲ್ಲಿ ಸ್ವರ್ಣ ಪದಕ ಗೆದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶಾಸಕ ಯಶಪಾಲ್ ಸುವರ್ಣ ಆಶಿಸಿದರು.ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಐಕ್ಯೂಎಸಿ, ಕ್ರೀಡಾ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ರೋವರ್ ಮತ್ತು ರೇಂಜರ್ ಘಟಕ, ಹಳೆವಿದ್ಯಾರ್ಥಿ ಸಂಘ, ಲಯನ್ಸ್ ಕ್ಲಬ್ ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಮತ್ತು ಕುಂದಾಪುರ, ಗೃಹ ರಕ್ಷಕ ದಳ ಹಾಗೂ ಪೌರ ರಕ್ಷಣಾ ದಳ ಉಡುಪಿ ಸಹಯೋಗದಲ್ಲಿ ತೆಂಕನಿಡಿಯೂರು ಕಾಲೇಜಿನಲ್ಲಿ ಶನಿವಾರ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ, ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಕಳೆದ ಒಂದು ದಶಕದಿಂದ ಕೇಂದ್ರ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ಖೇಲೋ ಇಂಡಿಯಾ ಕಾರ್ಯಕ್ರಮದ ಮೂಲಕ ದೇಶದ ಮೂಲೆ ಮೂಲೆಯಲ್ಲಿರುವ ಕ್ರೀಡಾಪಟುಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹ ನೀಡುತ್ತಿದೆ. 'ಖೇಲೆಗಾ ಭಾರತ್ ಜಿತೇಗಾ- ಭಾರತ್ ಏಕ್ ಘಂಟಾ ಖೇಲ್ ಕೇ ಮೆದಾನ್ ಮೆ' ಕಾರ್ಯಕ್ರಮ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ದಿನದ ಒಂದು ಗಂಟೆಯನ್ನು ಕ್ರೀಡೆಗಾಗಿ ಮೀಸಲಿಟ್ಟು ಜಿಲ್ಲೆಯ ಕ್ರೀಡಾಳುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯುನ್ನತ ಸಾಧನೆ ಮಾಡಲು ಇದು ಸಹಕಾರಿಯಾಗಲಿದೆ ಎಂದರು.
ಉತ್ತರ ಪ್ರದೇಶದ ಮೀರತ್'ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗಿದ್ದು ಪ್ರಥಮ ಬಾರಿಗೆ ಕ್ರೀಡೆಯಲ್ಲಿ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆಯುವ ಅವಕಾಶ ನೀಡಲಾಗಿದೆ. ಕ್ರೀಡೆಯಲ್ಲಿ ಇಂದು ವಿಪುಲ ಅವಕಾಶಗಳಿದ್ದು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಸಾಧನೆ ಮಾಡಬಹುದು ಎಂದರು.
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಫಿಟ್ ಇಂಡಿಯಾ ಪ್ರತಿಜ್ಞಾವಿಧಿ ಬೋಧಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಅಧ್ಯಕ್ಷ ಡಾ.ಜಯಕರ ಶೆಟ್ಟಿ, ಜಿಲ್ಲಾ ಗೃಹರಕ್ಷಕ ದಳದ ಸೆಕೆಂಡ್ ಇನ್ ಕಮಾಂಡೆಂಟ್ ಕೆ.ಸಿ.ರಾಜೇಶ್, ಹೋಮ್ ಗಾರ್ಡ್ ಇನ್ಸ್‌ಪೆಕ್ಟರ್ ಬಸವರಾಜ್, ರೆಡ್ ಕ್ರಾಸ್ ಖಜಾಂಜಿ ಶಿವರಾಮ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಲಿನಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀದೇವಿ ಮೊದಲಾದವರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ರೋವರ್ಸ್ ಮತ್ತು ರೇಂಜರ್ಸ್ ಸಂಚಾಲಕ ಮೆರ್ವಿನ್ ವಿಕ್ಟರ್ ಡಿ'ಸೋಜಾ ವಂದಿಸಿದರು. ಎನ್.ಎಸ್.ಎಸ್. ಅಧಿಕಾರಿ ಬಾಲರಾಜ್ ಡಿ.ಬಿ. ನಿರೂಪಿಸಿದರು.