ಲೋಕಬಂಧು ನ್ಯೂಸ್ | ಸುಳ್ಯ, ಆ.17
ನಾಗಾರಾಧನೆ ಹಾಗೂ ನಾಗದೋಷ ಪರಿಹಾರಕ್ಕಾಗಿ ದೇಶದ ವಿವಿಧ ಭಾಗಗಳ ಭಕ್ತರನ್ನು ತನ್ನೆಡೆಗೆ ಸೆಳೆಯುತ್ತಿರುವ ಕುಮಾರ ಪರ್ವತದ ತಪ್ಪಲಿನಲ್ಲಿ ನೆಲೆಗೊಂಡಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಸಾಂಪ್ರದಾಯಿಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಮುಂಜಾನೆಯಿಂದಲೇ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.
ಭಕ್ತರು ಸರತಿಯ ಸಾಲಿನಲ್ಲಿ ನಿಂತು ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ವಿವಿಧ ಸೇವೆಗಳನ್ನು ಸಲ್ಲಿಸಿ, ನಾಗದೇವರಿಗೆ ಹಾಲು, ಪಂಚಾಮೃತ ಸೇರಿದಂತೆ ವಿವಿಧ ದ್ರವ್ಯಗಳಿಂದ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದರು. ಕುಟುಂಬದ ಸುಖ, ಆರೋಗ್ಯ, ಸಂತಾನಭಾಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
ನಾಗರ ಪಂಚಮಿಯ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲದೆ ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಂದಲೂ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು.
ಭಕ್ತರು ಕುಮಾರಧಾರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಬಳಿಕ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಕ್ಷೇತ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆಯಿಂದಲೇ ಭಕ್ತರ ಸಂಚಾರ ಹೆಚ್ಚಾಗಿದ್ದು, ನಾಗರ ಪಂಚಮಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಕ್ಷೇತ್ರದಲ್ಲಿ ಒಳಾಂಗಣದಲ್ಲಿರುವ ನಾಗನ ವಿಗ್ರಹಕ್ಕೆ ತನು ಅರ್ಪಿಸಲು ಮುಂಜಾನೆಯಿಂದಲೇ ಭಕ್ತರ ದಂಡು ಕ್ಷೇತ್ರದಲ್ಲಿ ಕಂಡುಬಂದಿತ್ತು.
ನಾಗರಪಂಚಮಿ ಹಿನ್ನೆಲೆಯಲ್ಲಿ ನಾಗನಿಗೆ ಹಾಲು ಮತ್ತು ಸೀಯಾಳವನ್ನು ಸಮರ್ಪಿಸುವ ಮೂಲಕ ಭಕ್ತರು ನಾಗದೇವರ ಕೃಪೆಗೆ ಪಾತ್ರರಾದರು.
