ಲೋಕಬಂಧು ನ್ಯೂಸ್ | ಉಡುಪಿ, ಆ.23
ನೇಜಾರಿನಲ್ಲಿ ನಡೆದಿದ್ದ ತಾಯಿ ಹಾಗೂ ಮೂವರು ಮಕ್ಕಳ ಭೀಕರ ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಕಾರಾಗೃಹದಲ್ಲಿ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಆತನಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆ ಒದಗಿಸುವಂತೆ ಉಡುಪಿ ನ್ಯಾಯಾಲಯ ಜೈಲು ಆಡಳಿತಕ್ಕೆ ನಿರ್ದೇಶನ ನೀಡಿದೆ.
ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಆರೋಪಿ ಪ್ರವೀಣ್ ಚೌಗುಲೆ, ತನಗೆ ಜೈಲಿನೊಳಗೆ ಸಹಬಂಧಿಗಳಿಂದ ಜೀವ ಬೆದರಿಕೆ ಇದೆ ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾನೆ.
ಈ ಅರ್ಜಿಯ ವಿಚಾರಣೆ ನಡೆಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಆರೋಪಿಯ ಭದ್ರತೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲು ಹಾಗೂ ಅಗತ್ಯ ರಕ್ಷಣೆ ನೀಡಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 2,202 ಪುಟಗಳ ಬೃಹತ್ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ಮುಂದುವರಿದಿದೆ.
