ವೆನ್ಲಾಕ್ ಆಸ್ಪತ್ರೆಯಿಂದ ಪೊಕ್ಸೊ ಪ್ರಕರಣದ ಕೈದಿ ಪರಾರಿ

ಲೋಕಬಂಧು ನ್ಯೂಸ್ ಮಂಗಳೂರು, ಆ.2
ನಗರದ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕೈದಿಯೊಬ್ಬ ಪೊಲೀಸ್ ಸಿಬ್ಬಂದಿಯ ಕಣ್ತಪ್ಪಿಸಿ ಪರಾರಿಯಾದ ಘಟನೆ ಭಾನುವಾರ ನಡೆದಿದೆ.ಪೊಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಜಿಲ್ಲಾ ಕಾರಾಗೃಹದಿಂದ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಆತ ಪರಾರಿಯಾಗಿದ್ದಾನೆ.


ಕೈದಿ ಪರಾರಿಯಾದ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆ ಆವರಣ ಹಾಗೂ ನಗರದ ವಿವಿಧ ಭಾಗಗಳಲ್ಲಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದರು. ಪ್ರಮುಖ ರಸ್ತೆ, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ವಿವಿಧ ಕಡೆಗಳಲ್ಲಿ ತಪಾಸಣೆ ನಡೆಸಿ ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ.


ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಆಸ್ಪತ್ರೆಯಲ್ಲಿ ಪೊಲೀಸ್ ಬಂದೋಬಸ್ತಿನ ನಡುವೆಯೇ ಕೈದಿ ಪರಾರಿಯಾಗಿರುವುದು ಭದ್ರತಾ ವ್ಯವಸ್ಥೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ತನಿಖೆ ಮುಂದುವರಿದಿದೆ.