ಲೋಕಬಂಧು ನ್ಯೂಸ್ | ಮಣಿಪಾಲ, ಆ.31
ಜಿಲ್ಲೆಯ ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಿಂದ ಪ್ರತೀ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗುತ್ತಿದ್ದು, ಸಭೆ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಜಾಸೇವಾ ಇಲಾಖೆ ವತಿಯಿಂದ ಪ್ರಜಾಸೇವಾ ಆಂದೋಲನ ಸಭೆ ಸೆ.5ರಿಂದ 1 ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಸಭೆ ನಡೆಯಲಿವೆ. 2 ಮತ್ತು 4ನೇ ಶನಿವಾರದಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮತ್ತು ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಸಭೆ ಆಯೋಜಿಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಅರ್ಹರಿಗೆ ತಲುಪುವಂತೆ ಮಾಡುವ ಜೊತೆಗೆ ಕಚೇರಿಗಳಿಗೆ ತಮ್ಮ ಕೆಲಸಕ್ಕಾಗಿ ಪದೇ ಪದೇ ಅಲೆಯುವುದನ್ನು ತಪ್ಪಿಸಲು ಈ ಸಭೆಗಳನ್ನು ಆಯೋಜಿಸಲಾಗುತ್ತಿದೆ.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಪ್ರಜಾಸೇವೆ ಆಂದೋಲನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು, ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದರು.
ಸಭೆ ನಡೆಯುವ ದಿನಾಂಕದ 15 ದಿನ ಮುಂಚಿತವಾಗಿ ಸಂಬಂಧಪಟ್ಟ ಕ್ಷೇತ್ರ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಅಹವಾಲುಗಳಿಗೆ ಸಂಬಂಧಿಸಿದ ಪೂರ್ವ ಮುದ್ರಿತ ಅರ್ಜಿ ನಮೂನೆ ತಲುಪಿಸಬೇಕು. ಸಭೆ ನಡೆಯುವ ಸ್ಥಳಗಳಲ್ಲಿ ಗಣಕಯಂತ್ರ, ಇಂಟರ್'ನೆಟ್, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಇಲಾಖಾವಾರು ಕೌಂಟರ್'ಗಳನ್ನು ಸ್ಥಾಪಿಸಬೇಕು.
ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಹಾಜರಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಸಭೆ ನಡೆಯುವ ದಿನ ಸಂಬಂಧಪಟ್ಟ ಇಲಾಖೆಗಳು ಬೇರೆ ಯಾವುದೇ ಸಭೆಗಳನ್ನು ನಿಗದಿಪಡಿಸುವಂತಿಲ್ಲ ಎಂದರು.
ಸಭೆಗಳಲ್ಲಿ ಜಿಲ್ಲೆಯ ಪ್ರಮುಖ ಇಲಾಖೆಗಳು ವಸ್ತುಪ್ರದರ್ಶನ ಮಳಿಗೆ ಸ್ಥಾಪಿಸಿ, ಇಲಾಖೆಯಿಂದ ದೊರೆಯುವ ಸೇವೆ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು. ಫಲಾನುಭವಿಗಳಿಗೆ ಯಾವುದೇ ಸೌಲಭ್ಯ ವಿತರಣೆ ಇದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಸಭೆಗಳಲ್ಲಿ ವಿತರಿಸಲು ಅಗತ್ಯ ತಯಾರಿ ಮಾಡಿಟ್ಟುಕೊಳ್ಳಬೇಕು ಎಂದರು.
ಪ್ರಜಾಸೇವೆ ಆಂದೋಲನ ಸಭೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್.ಪಿ. ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ತಹಶೀಲ್ದಾರರುಗಳು ಇದ್ದರು.
