ಕೇರಳ ಮಾದರಿಯ ಹೆದ್ದಾರಿ ನಿರ್ಮಾಣಕ್ಕೆ ಚಿಂತನೆ

ಲೋಕಬಂಧು ನ್ಯೂಸ್ | ಮಣಿಪಾಲ, ಆ.18
ಕೇರಳ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಕುಂದಾಪುರದಿಂದ ತಲಪಾಡಿ ವರೆಗೆ ಅಪಘಾತ ರಹಿತ ರಸ್ತೆ ನಿರ್ಮಾಣ ಮಾಡುವ ಚಿಂತನೆ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ‌ ಹೇಳಿದರು.
ರಜತಾದ್ರಿಯ ಸಂಸದರ ಕಚೇರಿಯಲ್ಲಿ ಮಂಗಳವಾರ‌ ನಡೆದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಿಸಿದಂತೆ ಸರ್ವಿಸ್ ರಸ್ತೆ, ಮೇಲ್ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ಮತ್ತಿತರ ಬಾಕಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಪ್ರಮುಖವಾಗಿ ಕೋಟೇಶ್ವರ ಜಂಕ್ಷನ್'ನಿಂದ ಬೀಜಾಡಿ ಕ್ರಾಸ್ ವರೆಗಿನ ಸುಮಾರು 830 ಮೀ., ಅನ್ನಪೂರ್ಣ ಹೋಟೆಲ್'ನಿಂದ ಬೀಜಾಡಿ- ಕುಂಭಾಶಿ- ತೆಕ್ಕಟ್ಟೆ ಭಾಗದಲ್ಲಿ ಎರಡು ಬದಿ ಸುಮಾರು 3,500 ಮೀ., ತೆಕ್ಕಟ್ಟೆ ಭಾಗದಲ್ಲಿ ಸುಮಾರು 1,020 ಮೀ., ಬ್ರಹ್ಮಾವರ ಭಾಗದಲ್ಲಿ ಸುಮಾರು 400 ಮೀ., ಸಂತೆಕಟ್ಟೆ ಭಾಗದಲ್ಲಿ ಸುಮಾರು 1,000 ಮೀ., ಉದ್ಯಾವರ ಜಂಕ್ಷನ್ ಭಾಗದಲ್ಲಿ ಸುಮಾರು 325 ಮೀ. ಸೇರಿದಂತೆ ವಿವಿಧ ಭಾಗಗಳಲ್ಲಿ ಬಾಕಿ ಉಳಿದಿರುವ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ಎನ್.ಎಚ್. ಅಭಿಯಂತರರಿಗೆ ಸೂಚಿಸಿದರು.


ಮೇಲ್ಸೇತುವೆ, ಅಂಡರ್ ಪಾಸ್ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯ ಕೆಲವು ಕಡೆಗಳಲ್ಲಿ ಇನ್ನೂ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಿಲ್ಲ. ಚರಂಡಿಗಳ ಅಸಮರ್ಪಕತೆಯೂ ಕಂಡುಬರುತ್ತಿದೆ. ಸರ್ವಿಸ್ ರಸ್ತೆ ನಿರ್ಮಾಣ ಮಾಡುವಾಗ ಕಾಮಗಾರಿ ಗುಣಮಟ್ಟ ಹಾಗೂ ಸಂಚಾರ ಸುರಕ್ಷತಾ ಕ್ರಮ ಕಾಯ್ದುಕೊಳ್ಳುವಂತೆ ತಿಳಿಸಿದರು.


ಉಡುಪಿಯ ನಿಟ್ಟೂರು ಮತ್ತು ಬ್ರಹ್ಮಾವರದ ಮಹೇಶ್ ಹಾಸ್ಪಿಟಲ್ ಬಳಿ ಸ್ಥಳ ಪರಿಶೀಲಿಸಿ, ಸಾರ್ವಜನಿಕರ ಅಭಿಪ್ರಾಯ ಪಡೆದು ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೂಡಲೇ ಕ್ರಮ ವಹಿಸಲಾಗುವುದು. ಸಂತೆಕಟ್ಟೆ ಪೆಟ್ರೋಲ್ ಬಂಕ್'ನಿಂದ ಅಂಬಾಗಿಲು ಜಂಕ್ಷನ್ ವರೆಗೆ ಸುಮಾರು ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಮರಗಳ ತೆರವು ಕಾರ್ಯ ಈಗಾಗಲೇ ಆರಂಭವಾಗಿದೆ. ಕಿನ್ನಿಮೂಲ್ಕಿಯಿಂದ ಅಂಬಲಪಾಡಿ ಸಂಪರ್ಕಿಸುವ ರಸ್ತೆ ತೀರಾ ಹಾಳಾಗಿದ್ದು, ಅದನ್ನು ತುರ್ತಾಗಿ ತಾತ್ಕಾಲಿಕ ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.


ಕಟಪಾಡಿ ಅಂಡರ್ ಪಾಸ್‌ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈಗಾಗಲೇ ಒಂದು ಬದಿಯ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದರಿಂದ ವಾಹನ ದಟ್ಟಣೆ ಉಂಟಾಗುತ್ತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನನುಕೂಲವಾಗಿದೆ. ಇನ್ನೊಂದು ಬದಿಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.


ಕೇಂದ್ರ ಸರ್ಕಾರದ ಸುತ್ತೋಲೆ ಹಾಗೂ ಸುಪ್ರೀಂ ಕೋರ್ಟ್‌ನ ಆದೇಶದಂತೆ ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಿಂದ 75 ಮೀ. ಎರಡೂ ಬದಿಯಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಬಾರದು ಎಂಬ ಸೂಚನೆ ಇದ್ದು, ಈ ಸಂಬಂಧ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆದು ಕಾನೂನು ಚೌಕಟ್ಟಿನಲ್ಲಿ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳನ್ನು ಚರ್ಚಿಸಲಾಗುವುದು ಎಂದರು.


ಸಭೆಯಲ್ಲಿ ಎನ್.ಎಚ್.ಎ.ಐ. ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಜ್ಮಿ, ಎನ್.ಎಚ್.ಎ.ಐ ಕನ್ಸಲ್ಟೆಂಟ್ ಪ್ರೆಸಿಡೆಂಟ್ ಇಂಜಿನಿಯರ್ ಅಲೋಕ್ ಎಂ, ಎನ್.ಎಚ್.ಎ.ಐ. ಕನ್ಸಲ್ಟೆಂಟ್ ಟೀಮ್ ಲೀಡರ್ ಎನ್.ಆರ್. ಗೋಸ್ವಾಮಿ, ಧ್ರುವ್ ಕನ್ಸಲ್ಟೆನ್ಸಿಯ ಎ.ಎಚ್.ಇ ವಿಘ್ನೇಶ್ ಮೊದಲಾದವರಿದ್ದರು.