ಲೋಕಬಂಧು ನ್ಯೂಸ್ | ಉಡುಪಿ, ಆ.18
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಪ್ರಕರಣ ಕ್ರೈಸ್ತ ಸಮುದಾಯಕ್ಕೆ ತೀವ್ರ ಆಘಾತ ಉಂಟು ಮಾಡಿದ್ದು, ಆ ಕುರಿತು ರಾಜ್ಯ ಸರಕಾರ ಸೂಕ್ತ ತನಿಖೆ ನಡೆಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹಾ ಶಿರ್ವ ಆಗ್ರಹಿಸಿದ್ದಾರೆ.
ಹನೂರು ತಾಲೂಕಿನ ನಿವಾಸಿಗಳಾದ ಆ್ಯಂಟನಿ ಸ್ವಾಮಿ (50), ಜಾನ್ ರೋಸ್ ಪೀಟರ್ (42) ಹಾಗೂ ಆ್ಯಂಟನಿ ಕುಮಾರ್ (33) ಶನಿವಾರ ಮುಂಜಾನೆ ಕಾವೇರಿ ವನ್ಯಜೀವಿ ವಿಭಾಗದ ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿನ ದಾಳಿಗೆ ಬಲಿಯಾಗಿರುವುದು ನಿಜಕ್ಕೂ ಆಘಾತಕಾರಿ. ಅವರಿಂದ ಯಾವುದೇ ಪ್ರಮಾದ ಅಥವಾ ಅಪರಾಧವಾಗಿದ್ದರೂ ಗುಂಡಿಕ್ಕಿ ಹತ್ಯೆ ಮಾಡಿರುವುದು ಸಮರ್ಥನೀಯವಲ್ಲ.
ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಪ್ರವೇಶ, ಬೇಟೆ ಅಥವಾ ಯಾವುದೇ ಕಾನೂನುಬಾಹಿರ ಚಟುವಟಿಕೆಗಳನ್ನು ಕ್ರೈಸ್ತ ಸಮುದಾಯ ಬೆಂಬಲಿಸುವುದಿಲ್ಲ. ಆದರೆ, ನಡೆದ ತಪ್ಪಿಗೆ ಗುಂಡಿಕ್ಕಿ ನರಮೇಧ ನಡೆಸಿರುವುದು ಸರಿಯಾದ ಕ್ರಮವಲ್ಲ.
ಅರಣ್ಯಾಧಿಕಾರಿಗಳು ಮತ್ತು ಸಿಬಂದಿ ನಡೆದುಕೊಂಡ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಘಟನೆಯ ಸತ್ಯಾಂಶ ಬಯಲಿಗೆಳೆಯುವುದರೊಂದಿಗೆ ಮೃತ ಕುಟುಂಬಗಳಿಗೆ ಸರ್ಕಾರ ಸೂಕ್ತ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ಘಟನೆ ಕುರಿತು ರಾಜ್ಯ ಸರಕಾರ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದರೊಂದಿಗೆ ಮೃತರ ಕುಟುಂಬದವರಿಗೆ ಅರಣ್ಯ ಇಲಾಖೆಯಿಂದ ಗರಿಷ್ಟ ಪರಿಹಾರ ನೀಡಬೇಕು ಮತ್ತು ಪತೀ ಕುಟುಂಬದ ಓರ್ವ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡುವಂತೆ ಮೆಲ್ವಿನ್ ಅರಾನ್ಹಾ ಆಗ್ರಹಿಸಿದ್ದಾರೆ.
