ಲೋಕಬಂಧು ನ್ಯೂಸ್ | ಚೆನ್ನೈ, ಆ.4
ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಡಿಎಂಕೆ ಪಕ್ಷದ ಹಿರಿಯ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಂಜಾವೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಡೆದ ಪ್ರತಿಭಟನಾ ಸಭೆಯಲ್ಲಿ ನಟಿ ತೃಷಾ ಕೃಷ್ಣನ್ ಕುರಿತು ಆಕ್ಷೇಪಾರ್ಹ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿಯ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿದೆ.
ಏನಿದು ವಿವಾದ?
ತಂಜಾವೂರಿನಲ್ಲಿ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಹಾಗೂ ರೈತರ ಸಂಕಷ್ಟದ ಕುರಿತು ಡಿಎಂಕೆ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣದ ವೇಳೆ ಮುಖ್ಯಮಂತ್ರಿ ವಿಜಯ್ ವಿರುದ್ಧ ಟೀಕೆ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಕೆಲವರು ನಟಿ ತೃಷಾ ಕೃಷ್ಣನ್ ಅವರ ಹೆಸರನ್ನು ಕೂಗಲು ಆರಂಭಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್, 'ನೀರು ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪಬೇಕು. ನಾನು ಹೇಳಿದ್ದು ಕಾವೇರಿ ನೀರನ್ನು' ಎಂದು ನಗುತ್ತಾ ಹೇಳಿದ್ದು, ಈ ಹೇಳಿಕೆ ದ್ವಂದ್ವಾರ್ಥ ಹೊಂದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಯಿತು.
