ಸೆ.27: ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣೆ

ಲೋಕಬಂಧು ನ್ಯೂಸ್ | ಉಡುಪಿ, ಸೆ.25
ಯಕ್ಷಗಾನ ಕಲಾರಂಗದ ಅಂಗಸಂಸ್ಥೆ ವಿದ್ಯಾಪೋಷಕ್‌ನ 22ನೇ ವರ್ಷದ ವಿನಮ್ರ ಸಹಾಯಧನ ವಿತರಣೆ ಸಮಾರಂಭ ಸೆ.27ರಂದು ಬೆಳಿಗ್ಗೆ 9.30ರಿಂದ ಸಂಜೆ 4.30ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು‌ ಕಲಾರಂಗ ಅಧ್ಯಕ್ಷ ಎಂ. ಗಂಗಾಧರ ರಾವ್‌ ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 10 ಗಂಟೆಗೆ ಪರ್ಯಾಯ ಶೀರೂರು ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ ಕಾರ್ಯಕ್ರಮ ಉದ್ಘಾಟಿಸುವರು. ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡುವರು. ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಎಚ್‌.ಎಸ್‌. ಬಲ್ಲಾಳ್‌ ಅಧ್ಯಕ್ಷತೆ ವಹಿಸುವರು. ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಮೋಹನ ಆಳ್ವ , ಅಂಬಲಪಾಡಿ ದೇವಳದ ಕ್ಷೇತ್ರಾಧಿಕಾರಿ ಡಾ. ನಿ.ಬೀ. ವಿಜಯ ಬಲ್ಲಾಳ‌ ಮೊದಲಾದವರು ಭಾಗವಹಿಸುವರು ಎಂದರು.


ಅಪರಾಹ್ನ 2.30ರಿಂದ ನಡೆಯಲಿರುವ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡುವರು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಡಾ.ಜಿ. ಶಂಕರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗಾನ ಕಲಾರಂಗದ ವಾರ್ಷಿಕ ಸಂಚಿಕೆ ‘ಕಲಾತರಂಗ–2026’ನ್ನು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಬಿಡುಗಡೆಗೊಳಿಸುವರು ಎಂದು ಗಂಗಾಧರ ರಾವ್ ವಿವರಿಸಿದರು.


ಸಂಸ್ಥೆ ಈವರೆಗೆ ಒಟ್ಟು 103 ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಇನ್ನೂ 21 ಮನೆಗಳು ನಿರ್ಮಾಣ ಹಂತದಲ್ಲಿವೆ. 32 ಮನೆಗಳು ನಿರ್ಮಾಣಕ್ಕೆ ಆಯ್ಕೆಯಾಗಿವೆ. ಈ ಬಾರಿ ವಿದ್ಯಾಪೋಷಕ್‌ ಹಾಗೂ ಯಕ್ಷಗಾನ ಕಲಾವಿದರ ಮಕ್ಕಳು ಸೇರಿದಂತೆ 1,273 ವಿದ್ಯಾರ್ಥಿಗಳಿಗೆ 1.75 ಕೋಟಿ ರೂ. ಸಹಾಯಧನ ಹಾಗೂ 15 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಾಗುವುದು ಎಂದರು.


ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್‌, ಜೊತೆ ಕಾರ್ಯದರ್ಶಿ ನಾರಾಯಣ ಹೆಗಡೆ, ಉಪಾಧ್ಯಕ್ಷರಾದ ಕಿಶನ್‌ ಹೆಗ್ಡೆ ಮತ್ತು ವಿ.ಜಿ.ಶೆಟ್ಟಿ ಉಪಸ್ಥಿತರಿದ್ದರು.