ಲೋಕಬಂಧು ನ್ಯೂಸ್ | ಉಡುಪಿ, ಸೆ.16
ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೆ.18ರಂದು ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದ್ದು, ಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಹೊಸ ಬಲ ನೀಡುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ.ಕರಾವಳಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದು, ಇಲ್ಲಿನ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಐಟಿ ಸೇರಿದಂತೆ ವಿವಿಧ ಕಂಪನಿಗಳ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಬೇಕಿದೆ. ಅದರಿಂದ ಸ್ಥಳೀಯ ಯುವಜನತೆಗೆ ಉದ್ಯೋಗಾವಕಾಶ ಹೆಚ್ಚಲಿದೆ ಎಂದವರು ಹೇಳಿದ್ದಾರೆ.
ಪ್ರವಾಸೋದ್ಯಮಕ್ಕೆ ಕರಾವಳಿಯಲ್ಲಿ ವಿಫುಲ ಅವಕಾಶಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಿ ಹೆಚ್ಚಿನ ಹೂಡಿಕೆ ಆಕರ್ಷಿಸುವ ಅಗತ್ಯವಿದೆ. ದೇಶ- ವಿದೇಶಗಳ ಪ್ರವಾಸಿಗರು ಕರಾವಳಿಯತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮೂಲಸೌಕರ್ಯ ಕಲ್ಪಿಸಬೇಕು. ಮೀನುಗಾರಿಕೆ, ಬಂದರುಗಳ ಅಭಿವೃದ್ಧಿ ಹಾಗೂ ಮೀನು ಸಂಸ್ಕರಣಾ ಘಟಕಗಳ ಅಭಿವೃದ್ಧಿಗೆ ಒತ್ತುನೀಡುವ ಮೂಲಕ ಕಡಲ ಮಕ್ಕಳ ಬದುಕಿಗೆ ಪೂರಕ ಯೋಜನೆಗಳನ್ನು ರೂಪಿಸಬೇಕಿದೆ.
ಅರಣ್ಯ ಭೂಮಿ ಸಮಸ್ಯೆ, ಕಡಲ್ಕೊರೆತ, ಕಸ್ತೂರಿ ರಂಗನ್ ವರದಿ, ಗಣಿಗಾರಿಕೆ, ಕೆಂಪುಕಲ್ಲು ಹಾಗೂ ಮರಳು ಸಮಸ್ಯೆಗಳಿಗೂ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ಕಾಂಚನ್ ತಿಳಿಸಿದ್ದಾರೆ.
ಕರಾವಳಿ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳು ಸಂಪುಟ ಸಭೆಯಲ್ಲಿ ಕೈಗೊಳ್ಳುವಂತಾಗಲಿ ಹಾಗೂ ಆಡಳಿತ ವ್ಯವಸ್ಥೆ ಕರಾವಳಿ ಜನರಿಗೆ ಇನ್ನಷ್ಟು ಹತ್ತಿರವಾಗಲಿ ಎಂದು ಪ್ರಸಾದ್ ರಾಜ್ ಕಾಂಚನ್ ಆಶಿಸಿದ್ದಾರೆ.