ಲೋಕಬಂಧು ನ್ಯೂಸ್ | ಬೆಂಗಳೂರು
ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಫ್ರೀಡಂ ಪಾರ್ಕ್ ಬಳಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಭೇಟಿಯಾಗಿ ಲೀಟರ್ ಹಾಲಿಗೆ 12 ರೂ. ಹೆಚ್ಚಳ ಮಾಡಿ ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು.
ಪ್ರಸ್ತುತ ಹಾಲಿನ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಿಎಂ ಡಿಕೆಶಿ ಹೇಳಿದರು.
ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಸದಾಶಿವನಗರ ನಿವಾಸದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಹಾಲಿನ ದರ ಏರಿಕೆ ಕುರಿತು ಪ್ರಸ್ತಾವನೆ ಸಲ್ಲಿಸಿದರು.
ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಬಳ್ಳಾರಿ ಹಾಲು ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್, ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ವೈ. ನಂಜೇಗೌಡ ಸೇರಿದಂತೆ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ. ಸುರೇಶ್, ಆಡಳಿತಾಧಿಕಾರಿ ಎಂ.ವಿ. ವೆಂಕಟೇಶ್ ಉಪಸ್ಥಿತರಿದ್ದರು.
