ಲೋಕಬಂಧು ನ್ಯೂಸ್ ಬಂಟ್ವಾಳ
ಇಲ್ಲಿನ ಬಡಗಬೆಳ್ಳೂರಿನಲ್ಲಿ ನಡೆದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಂದಾಳು ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆಯ ಸಹಾಯಕ ತನಿಖಾಧಿಕಾರಿ ಕಲೈಮಾರ್ ಪಿ. ಅವರು ನೋಟಿಸ್ ಜಾರಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸತ್ಯಾಂಶಗಳು ಹಾಗೂ ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ವಿಚಾರಣೆ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 26ರಂದು ಕಲ್ಲಡ್ಕದಲ್ಲಿರುವ ಭಟ್ ನಿವಾಸದಲ್ಲೇ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಅಗತ್ಯ ಮಾಹಿತಿ ಒದಗಿಸಿ ತನಿಖೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ.
2025ರ ಮೇ 27ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇದುವರೆಗೆ 23 ಮಂದಿಯನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಆರೋಪಿಗಳ ಪೈಕಿ ಭರತ್ ಕುಮ್ಡೇಲು ಸಹಿತ ಎಂಟು ಮಂದಿಯ ವಿರುದ್ಧ ಪ್ರಕರಣದ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ)ಯಡಿ ಕ್ರಮ ಕೈಗೊಳ್ಳಲಾಗಿದ್ದು, ಅದಕ್ಕೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಅದರ ಬೆನ್ನಲ್ಲೇ ಭರತ್ ಸಹಿತ ಅರು ಮಂದಿಯ ವಿರುದ್ದ ಗೂಂಡಾ ಕಾಯ್ದೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಜಮೀನು ಮಂಜೂರಾದರೂ ಜೈಲಿನಲ್ಲಿಯೇ ಉಳಿಯುವಂತಾಗಿತ್ತು.