ಜನರ ಸಮಸ್ಯೆ, ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ

ಲೋಕಬಂಧು ನ್ಯೂಸ್ | ಉಡುಪಿ, ಸೆ.9
ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬುಧವಾರ ನಡೆದ ಉಡುಪಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.


ಸರಕಾರ ಹಾಗೂ ಜನರ ನಡುವಿನ ಬಾಂಧವ್ಯ ಸದಾ ಗಟ್ಟಿಯಾಗಿರಬೇಕು. ಸರಕಾರಿ ಸೇವೆ ಪಡೆಯಲು ಜನರು ಕಚೇರಿಗಳಿಗೆ ವಾರಗಟ್ಟಲೆ ಅಲೆಯುವ ಪರಿಸ್ಥಿತಿ ತಪ್ಪಿಸುವ ಉದ್ದೇಶದಿಂದ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದರು.


ತಾಲೂಕು ಮಟ್ಟದಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಮತ್ತು ಹೋಬಳಿ ಮಟ್ಟದಲ್ಲಿ ಎರಡನೇ ಹಾಗೂ ನಾಲ್ಕನೇ ಶನಿವಾರ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಪ್ರತಿ ಬುಧವಾರ ಜಿಲ್ಲಾಧಿಕಾರಿ  ಹಿರಿಯ ಅಧಿಕಾರಿಗಳೊಂದಿಗೆ ಅರ್ಜಿಗಳ ಪ್ರಗತಿ ಪರಿಶೀಲಿಸಲಿದ್ದಾರೆ ಎಂದರು.


ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಅಧಿಕಾರಿಗಳ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ನೆನಪಿಸುವ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಈ ಸಭೆ ಪರಿಣಾಮಕಾರಿಯಾಗಲಿದೆ ಎಂದರು.


ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಮನೆ ಬಾಗಿಲಿಗೂ ಸರಕಾರಿ ಯೋಜನೆಗಳನ್ನು ತಲುಪಿಸುವ ಪ್ರಯತ್ನದ ಭಾಗವಾಗಿ ಸಭೆ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜನಾಥ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್. ಓ ರುಥೇನ್ ಮೊದಲಾದವರಿದ್ದರು.
ಸಭೆಯಲ್ಲಿ ಖಾತೆ ಪೋಡಿ, ದರ್ಖಾಸ್ತು ಜಮೀನು, ಕಾಲುದಾರಿ, ಮನೆ-ನಿವೇಶನ, ಚರಂಡಿ, ಕೆರೆ ಅಭಿವೃದ್ಧಿ, ಗೃಹಜ್ಯೋತಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು 208 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸಚಿವರು ಸಾರ್ವಜನಿಕರ ಅಹವಾಲು ಆಲಿಸಿ, ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸ್ವಾಗತಿಸಿ, ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿದರು.
ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳು, ಸಂಜೀವಿನಿ ಉತ್ಪನ್ನಗಳ ಮಾರಾಟ ಮಳಿಗೆ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.